ಕೇಂದ್ರದಿಂದ ಈ.ಡಿ., ಸಿಬಿಐ ದುರುಪಯೋಗ: ಕಾಂಗ್ರೆಸ್ ಆರೋಪ

Update: 2019-08-30 18:24 GMT

ಮಂಡ್ಯ, ಆ.30: ಕೇಂದ್ರ ಸರಕಾರ ಜಾರಿ ನಿರ್ದೇಶನಾಲಯ (ಈ.ಡಿ.) ಹಾಗು ಸಿಬಿಐ ಸಂಸ್ಥೆಯ ಅಧಿಕಾರಿಗಳನ್ನು ಬಳಸಿಕೊಂಡು ಕಾಂಗ್ರೆಸ್ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಜಿಲ್ಲೆಯ ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಶುಕ್ರವಾರ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಈ.ಡಿ. ಹಾಗು ಸಿಬಿಐ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಲು ಮುಂದಾಗಿದ್ದಾರೆ ಎಂದು ದೂರಿದರು.

ಯಾವುದೇ ವ್ಯಕ್ತಿಯ ಮೇಲೆ ಆರೋಪ ಬಂದರೆ ಅದು ಸಾಬೀತಾದ ನಂತರ ಬಂಧಿಸಬೇಕು. ಆದರೆ, ಕೇಂದ್ರ ಸರಕಾರ ಸೇಡಿನ ರಾಜಕಾರಣ ಮಾಡುತ್ತಾ, ಪ್ರಜಾಪ್ರಭುತ್ವದ ವಿರೋಧಿ ನಿಲುವು ತೆಗೆದುಕೊಂಡಿದೆ. ಆ ಮೂಲಕ ಭಾರತದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣ ಮಾಡಲು ಮುಂದಾಗಿದೆ ಎಂದು ಅವರು ದೂರಿದರು.

ಒಂದು ವೇಳೆ ನಮ್ಮ ನಾಯಕರಾದ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದರೆ ಸುಮ್ಮನಿರಲ್ಲ. ನಮ್ಮ ಮೇಲೆ ಯಾವುದೇ ನಿರ್ಬಂಧ ಹೇರಿದರೂ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸೇಡಿನ ರಾಜಕಾರಣ ಮಾಡುವುದನ್ನು ಬಿಡಬೇಕು. ದೇಶದ ಅಭಿವೃದ್ಧಿ ಮತ್ತು ಸಮಸ್ಯೆಗಳ ನಿವಾರಣೆಗೆ ಮುಂದಾಗಬೇಕು. ಇಲ್ಲದಿದ್ದರೆ ಮುಂದೆ ಮತದಾರರೇ ತಕ್ಕಪಾಠ ಕಲಿಸಲಿದ್ದಾರೆ ಎಂದರು.

ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶ್ರೀಕಾಂತ್, ನಗರ ಕಾಂಗ್ರೆಸ್ ಅಧ್ಯಕ್ಷ ರುದ್ರಪ್ಪ, ಮೈಷುಗರ್ ಮಾಜಿ ಅಧ್ಯಕ್ಷ ಹಾಲಹಳ್ಳಿ ರಾಮಲಿಂಗಯ್ಯ, ಸಿದ್ದರಾಮೇಗೌಡ, ಮುಖಂಡರಾದ ಎಂ.ಎಸ್.ಚಿದಂಬರ್, ಸಿ.ಎಂ.ದ್ಯಾವಪ್ಪ, ಹಾಗು ಪಾಪಣ್ಣ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News