×
Ad

'ಖಾಸಗಿ ವಲಯಗಳಲ್ಲಿ ಉದ್ಯೋಗ ಒದಗಿಸುವ ಬಗ್ಗೆ ಸರಕಾರ ಚಿಂತನೆ'

Update: 2019-08-31 17:43 IST

ಉಡುಪಿ, ಆ.31: ಯುವಜನಾಂಗಕ್ಕೆ ಉದ್ಯೋಗ ನೀಡುವಂತಹ ಗುರುತರ ಜವಾಬ್ದಾರಿ ಸರಕಾರದ ಮೇಲಿದೆ. ಆದರೆ ರಾಜ್ಯದಲ್ಲಿ ಶೇ.1ಕ್ಕಿಂತ ಹೆಚ್ಚು ಸರಕಾರಿ ಉದ್ಯೋಗ ದೊರಕಲು ಸಾಧ್ಯವಿಲ್ಲ. ಆದುದರಿಂದ ಪದವಿ ಮುಗಿಸಿದ ವಿದ್ಯಾರ್ಥಿಗಳು ಸ್ವಯಂ ಉದ್ಯೋಗದ ಬಗ್ಗೆ ಹೆಚ್ಚು ಗಮನಕೊಡಬೇಕು. ನಿರುದ್ಯೋಗಿಗಳಿಗೆ ಖಾಸಗಿ ವಲಯಗಳಲ್ಲಿ ಉದ್ಯೋಗ ದೊರಕಿಸಿಕೊಡುವ ಬಗ್ಗೆ ಸರಕಾರ ಚಿಂತನೆ ಮಾಡುತ್ತಿದೆ ಎಂದು ರಾಜ್ಯ ಮುಜರಾಯಿ, ಮೀನುಗಾರಿಕೆ ಮತ್ತು ಬಂದರು, ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಅಜ್ಜರಕಾಡು ಪುರಭವನದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಯುವಜನಾಂಗ ಸಮರ್ಪಣಾ ಮನೋಭಾವದಿಂದ ರಾಷ್ಟ್ರಕ್ಕಾಗಿ ದುಡಿದರೆ ದೇಶ ಅಭಿವೃದ್ದಿ ಹೊಂದಲು ಸಾಧ್ಯ. ಜಿಲ್ಲೆಯಲ್ಲಿ ವಿದ್ಯಾರ್ಥಿಗಳನ್ನು ಗುರಿಯಾಗಿ ರಿಸಿಕೊಂಡು ಮಾದಕ ದ್ರವ್ಯಗಳ ಮಾರಾಟದ ಗುಂಪು ಸೃಷ್ಠಿಯಾಗಿದ್ದು, ಈ ಗುಂಪು ಅಮಾಯಕ ವಿದ್ಯಾರ್ಥಿಗಳನ್ನು ಮಾದಕ ವ್ಯಸನಿಯನ್ನಾಗಿಸಿ ಪರಿವರ್ತಿ ಸುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆ ಮಾದಕದ್ರವ್ಯ ಮಾರಾಟ ಜಾಲವನ್ನು ಹತ್ತಿಕ್ಕುವಂತೆ ಸೂಚನೆ ನೀಡಲಾಗಿದೆ. ಸಮಾಜ ಸ್ವಾಸ್ಥ ಕೆಡಿಸುವವರ ಬಗ್ಗೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಪಂ ಅಧ್ಯಕ್ಷ ದಿನಕರ ಬಾಬು ಮಾತನಾಡಿ, ಯುವ ಜನೋತ್ಸವದಂತಹ ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಇದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಿ ಅನುದಾನ ದೊರಕಿಸಿ ಕೊಡಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ತಾಪಂ ಅಧ್ಯಕ್ಷೆ ನೀತಾ ಗುರುರಾಜ ಪೂಜಾರಿ, ಕಾಲೇಜಿನ ಪ್ರಾಂಶುಪಾಲ ಭಾಸ್ಕರ್ ಶೆಟ್ಟಿ ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ರಾಜೇಂದ್ರ ಕೆ ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ನಿತ್ಯಾನಂದ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News