ಸಚಿವ ಕೆ.ಎಸ್.ಈಶ್ವರಪ್ಪ ಕಾರಿಗೆ ಮುತ್ತಿಗೆ ಹಾಕಿ, ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು

Update: 2019-08-31 13:13 GMT

ಶಿವಮೊಗ್ಗ, ಆ. 31: ರಾಜ್ಯದಲ್ಲಿ ಉಂಟಾದ ನೆರೆ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ವಿಫಲವಾಗಿದೆ ಎಂದು ಆರೋಪಿಸಿ ಶನಿವಾರ ಜಿಲ್ಲಾ ಕಾಂಗ್ರೆಸ್ ಪಕ್ಷ ನಗರದ ಮಹಾವೀರ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಅದೇ ಮಾರ್ಗದಲ್ಲಿ ಆಗಮಿಸಿದ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪರವರಿದ್ದ ಕಾರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಲೆತ್ನಿಸಿದ ಘಟನೆ ನಡೆಯಿತು. 

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲು ಮಹಾವೀರ ವೃತ್ತದ ಮೂಲಕ ಸಚಿವರಿದ್ದ ಕಾರು ತೆರಳುತ್ತಿತ್ತು. ಇದನ್ನು ಗಮನಿಸಿದ ಕೆಲ ಕಾಂಗ್ರೆಸ್ ಕಾರ್ಯಕರ್ತರು ಕಾರನ್ನು ಅಡ್ಡ ಹಾಕಲೆತ್ನಿಸಿದರು. ರಾಜ್ಯ, ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಲಾರಂಭಿಸಿದರು. 

ತಕ್ಷಣವೇ ಸ್ಥಳದಲ್ಲಿದ್ದ ಪೊಲೀಸರು ಕಾರನ್ನು ಸುತ್ತುವರಿದಿದ್ದ ಕಾರ್ಯಕರ್ತರನ್ನು ಚದುರಿಸಿ, ಸಚಿವರ ಕಾರಿಗೆ ಜಾಗ ಮಾಡಿಕೊಟ್ಟರು. ಈ ಘಟನೆಯಿಂದ ಸ್ಥಳದಲ್ಲಿ ಕೆಲ ಸಮಯ ಗೊಂದಲದ ವಾತಾವರಣ ನಿರ್ಮಾಣವಾಗುವಂತಾಯಿತು. 

ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ತೀವ್ರ ಸ್ವರೂಪದ ನೆರೆಯಿಂದ ಭಾರೀ ಪ್ರಮಾಣದ ನಷ್ಟ ಉಂಟಾಗಿದೆ. ಅಪಾರ ಪ್ರಮಾಣದ ಆಸ್ತಿಪಾಸ್ತಿ ಸೇರಿದಂತೆ ಜೀವಹಾನಿಯಾಗಿದೆ. ಆದರೆ ನೆರೆ ಸಂತ್ರಸ್ತರಿಗೆ ನೆರವಾಗುವಲ್ಲಿ, ಸೂಕ್ತ ಪರಿಹಾರ ಕಾಮಗಾರಿ ಅನುಷ್ಠಾನಗೊಳಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. 

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಬೇಕು. ಪ್ರಸ್ತುತ ನೆರೆ ಸಂತ್ರಸ್ತರಿಗೆ ಘೋಷಿಸಿರುವ ಪರಿಹಾರ ಮೊತ್ತವನ್ನು ಕಾಲಮಿತಿಯಲ್ಲಿ ತಲುಪಿಸುವ ಕಾರ್ಯ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. 

ನೆರೆಯಿಂದ ರಾಜ್ಯದಲ್ಲಿ ಸರಿಸುಮಾರು 30 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ನಷ್ಟವಾಗಿದೆ. ಆದರೆ ಕೇಂದ್ರ ಸರ್ಕಾರ ಪರಿಹಾರ ಮೊತ್ತ ಬಿಡುಗಡೆ ಮಾಡಲು ಮೀನಮೇಷ ಎಣಿಸುತ್ತಿದೆ. ತಕ್ಷಣವೇ ಕೇಂದ್ರ ಸರ್ಕಾರ ನೆರೆ ಪರಿಹಾರ ಮೊತ್ತ ಬಿಡುಗಡೆಗೊಳಿಸಬೇಕು ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. 

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳಾಗುತ್ತಾ ಬಂದರೂ ಮುಖ್ಯಮಂತ್ರಿ ಯಡಿಯೂರಪ್ಪರವರು ಸಂತ್ರಸ್ತರಿಗೆ ನೆರವಾಗುವ ನಿಟ್ಟಿನಲ್ಲಿ ಯಾವುದೇ ಕ್ರಮಕೈಗೊಂಡಿಲ್ಲ. ಬರೀ ಸರ್ಕಾರಿ ನೌಕರರ ವರ್ಗಾವಣೆ ದಂಧೆಯಲ್ಲಿ ಅವರು ತಲ್ಲೀನರಾಗಿದ್ದಾರೆ ಇದೇ ವೇಳೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. 

ಪ್ರತಿಭಟನೆಯಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಎಂಎಲ್‍ಸಿ ಆರ್.ಪ್ರಸನ್ನಕುಮಾರ್, ಮುಖಂಡರಾದ ಸುಂದರೇಶ್, ಕೆ.ಬಿ.ಪ್ರಸನ್ನಕುಮಾರ್, ರಮೇಶ್ ಹೆಗಡೆ, ವಿಶ್ವನಾಥ ಕಾಶೀ, ಎಲ್. ರಾಮೇಗೌಡ, ಸಿ.ಜೆ.ಮಧುಸೂಧನ್, ಕೆ. ಚೇತನ್, ಯೋಗೇಶ್, ಇಸ್ಮಾಯಿಲ್ ಖಾನ್, ಹೆಚ್.ಪಿ.ಗಿರೀಶ್ ಸೇರಿದಂತೆ ಮೊದಲಾದವರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News