ಉ.ಪ್ರ.ವಿಧಾನಸಭಾ ಚುನಾವಣೆಯ ಮೇಲೆ ಕಾಂಗ್ರೆಸ್ ಕಣ್ಣು: ಪ್ರಿಯಾಂಕಾಗೆ ಹೆಚ್ಚಿನ ಜವಾಬ್ದಾರಿ ವಹಿಸಲು ಚಿಂತನೆ
ಹೊಸದಿಲ್ಲಿ,ಸೆ.3: ಉತ್ತರ ಪ್ರದೇಶ ವಿಧಾನಸಭೆಗೆ 2022ರಲ್ಲಿ ನಡೆಯಲಿರುವ ಚುನಾವಣೆಯ ಮೇಲೆ ಕಣ್ಣಿರಿಸಿರುವ ಕಾಂಗ್ರೆಸ್ ರಾಜ್ಯದಲ್ಲಿ ಪಕ್ಷವನ್ನು ಪುನಃಶ್ಚೇತನಗೊಳಿಸುವ ಪ್ರಮುಖ ಹೊಣೆಗಾರಿಕೆಯನ್ನು ತನ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ವಹಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ಮಂಗಳವಾರ ತಿಳಿಸಿವೆ. 2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 80 ಸ್ಥಾನಗಳ ಪೈಕಿ ಕೇವಲ ಒಂದು ಸ್ಥಾನವನ್ನು ಗೆಲ್ಲಲು ಕಾಂಗ್ರೆಸ್‌ಗೆ ಸಾಧ್ಯವಾಗಿತ್ತು.
ಪ್ರಿಯಾಂಕಾರನ್ನು ಇಡೀ ಉತ್ತರ ಪ್ರದೇಶದ ಉಸ್ತುವಾರಿಯನ್ನಾಗಿ ಮಾಡಬಹುದು. ಈ ಬಗ್ಗೆ ನಿರ್ಧಾರವನ್ನು ಮುಂಬರುವ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಪಕ್ಷದ ಹಿರಿಯ ನಾಯಕರೋರ್ವರು ಸುದ್ದಿಸಂಸ್ಥೆಗೆ ತಿಳಿಸಿದರು.
ಪ್ರಿಯಾಂಕಾರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಹುದ್ದೆಗೆ ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಪಕ್ಷದ ನಾಯಕರು ಕಳೆದ ಜೂನ್‌ನಲ್ಲಿ ಆಗ್ರಹಿಸಿದ್ದರು. ಕಾಂಗ್ರೆಸ್ 1989ರಿಂದಲೂ ರಾಜ್ಯದಲ್ಲಿ ಅಧಿಕಾರದಿಂದ ವಂಚಿತವಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಪ್ರಿಯಾಂಕಾ ಅವರು ಪಕ್ಷವನ್ನು ಬಲಗೊಳಿಸುವ ಕುರಿತು ಮರುಮಾಹಿತಿಗಳನ್ನು ಪಡೆಯಲು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.
ಈ ವರ್ಷದ ಜನವರಿಯಲ್ಲಿ ರಾಜಕೀಯ ರಂಗವನ್ನು ಪ್ರವೇಶಿಸಿದ್ದ ಪ್ರಿಯಾಂಕಾರನ್ನು ಪೂರ್ವ ಉತ್ತರ ಪ್ರದೇಶದಲ್ಲಿಯ 41 ಲೋಕಸಭಾ ಕ್ಷೇತ್ರಗಳ ಉಸ್ತುವಾರಿಯನ್ನಾಗಿ ನಿಯೋಜಿಸಲಾಗಿತ್ತು. ಅವರು 36ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ವ್ಯಾಪಕ ಪ್ರಚಾರ ನಡೆಸಿದ್ದರೂ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ವಿಫಲಗೊಂಡಿದ್ದರು.