ಶಿವಮೊಗ್ಗ: ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Update: 2019-09-04 11:33 GMT

ಶಿವಮೊಗ್ಗ, ಸೆ. 4: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ (ಈಡಿ) ದ ಕ್ರಮ ವಿರೋಧಿಸಿ ಹಾಗೂ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. 

ಮಹಾವೀರ ವೃತ್ತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ, ಘೋಷಣೆ ಕೂಗಿದರು. ಜೊತೆಗೆ ಡಿ.ಕೆ.ಶಿವಕುಮಾರ್ ಭಾವಚಿತ್ರವಿದ್ದ ಪೋಸ್ಟರ್ ಗೆ ಹಾಲಿನ ಅಭಿಷೇಕ ಕೂಡ ನಡೆಸಿದರು. 

ಕೇಂದ್ರ ಸರ್ಕಾರವು ಹೀನ ರಾಜಕಾರಣದಲ್ಲಿ ತೊಡಗಿದೆ. ಪ್ರಜಾಪ್ರಭುತ್ವ ಆಶಯಗಳನ್ನು ಮಣ್ಣು ಪಾಲು ಮಾಡುತ್ತಿದೆ. ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಪ್ರತಿಪಕ್ಷ ಕಾಂಗ್ರೆಸ್ ನಾಯಕರ ಮೇಲೆ ಸಲ್ಲದ ಆರೋಪ ಹೊರಿಸಿ, ಬಂಧಿಸುವ ಕಾರ್ಯ ನಡೆಸುತ್ತಿದೆ. ಇದಕ್ಕೆ ಕೇಂದ್ರದ ಮಾಜಿ ಸಚಿವ ಚಿದಂಬರಂ ಹಾಗೂ ರಾಜ್ಯದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನ ಸಾಕ್ಷಿ. ರಾಜಕೀಯ ದ್ವೇಷದ ಕಾರಣದಿಂದಲೇ ಈ ಇಬ್ಬರು ನಾಯಕರನ್ನು ತನಿಖಾ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ ಬಂಧಿಸಿದೆ. ಇದು ಅಕ್ಷಮ್ಯ ಅಪರಾಧ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. 

ಕೇಂದ್ರದ ಬಿಜೆಪಿ ಸರ್ಕಾರವು ಸಂವಿಧಾನಬದ್ದ ತನಿಖಾ ಸಂಸ್ಥೆಗಳ ತನಿಖೆಯಲ್ಲಿ ಹಸ್ತಕ್ಷೇಪ, ಪ್ರಭಾವ ಬೀರುತ್ತಿದೆ. ತಮಗಾಗದ ಪ್ರತಿಪಕ್ಷ ನಾಯಕರನ್ನು ತನಿಖಾ ಸಂಸ್ಥೆಗಳ ಮೂಲಕ ಬಂಧಿಸಿ ಜೈಲಿಗಟ್ಟುವ ಕುತಂತ್ರ ರಾಜಕಾರಣ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಹಿಂದೆ ಗುಜರಾತ್ ರಾಜ್ಯದ ಕಾಂಗ್ರೆಸ್ ಪಕ್ಷದ ಶಾಸಕರಿಗೆ ರಕ್ಷಣೆ ನೀಡಿದ ಹಿನ್ನೆಲೆಯಲ್ಲಿಯೇ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾರವರು ಜೊತೆಗೂಡಿ ಡಿ.ಕೆ.ಶಿವಕುಮಾರ್ ವಿರುದ್ದ ದ್ವೇಷದ ರಾಜಕಾರಣ ನಡೆಸುತ್ತಿದ್ದಾರೆ. 

ತಕ್ಷಣವೇ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಹಾಗೂ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಬೀದಿಗಿಳಿದು ಉಗ್ರ ಸ್ವರೂಪದ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಪಕ್ಷದ ವಿವಿಧ ವಿಭಾಗಗಳ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News