ಗಲ್ಲಿಗೆ ಹಾಕಿದರೂ ಕಾಂಗ್ರೆಸ್ ಪರ ನಿಲ್ಲುತ್ತೇವೆ: ಲಕ್ಷ್ಮಿ ಹೆಬ್ಬಾಳ್ಕರ್

Update: 2019-09-04 13:37 GMT

ಬೆಂಗಳೂರು, ಸೆ.4: ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಕಾಂಗ್ರೆಸ್ ಪರವಾಗಿ ನಿಂತಿದ್ದಕ್ಕೆ ಇಂತಹ ಪರಿಸ್ಥಿತಿ ಎದುರಾಗಿದೆ. ನಮ್ಮನ್ನು ಗಲ್ಲಿಗೆ ಹಾಕಿದರೂ ನಾವು ಕಾಂಗ್ರೆಸ್ ಪರವಾಗಿ, ಗಾಂಧಿ ಪರಿವಾರದ ಪರವಾಗಿ ನಿಲ್ಲುತ್ತೇವೆ ಎಂದಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಿವಕುಮಾರ್ ವಿಚಾರಣೆಗೆ ಎಲ್ಲ ರೀತಿಯ ಸಹಕಾರ ನೀಡುತ್ತಾ ಬಂದಿದ್ದಾರೆ. ಜಾರಿ ನಿರ್ದೇಶನಾಲಯ ಕರೆದಾಗಲೆಲ್ಲ ಹಾಜರಾಗುತ್ತಿದ್ದಾರೆ. 4 ದಿನ ಸತತ ವಿಚಾರಣೆಯ ನಂತರವೂ ಬಂಧಿಸಿರುವುದರ ಹಿಂದೆ ಬಿಜೆಪಿಯ ಕುಮ್ಮಕ್ಕು ಇರುವುದು ಸ್ಪಷ್ಟವಾಗಿದೆ ಎಂದು ದೂರಿದ್ದಾರೆ.

ಈ ಪ್ರಕರಣ ಆದಾಯ ತೆರಿಗೆ ಇಲಾಖೆಯ ಅಡಿಯಲ್ಲಿ ಬರುತ್ತದೆ. ಹಣ ತಮ್ಮದೆಂದೂ, ಅದಕ್ಕೆ ಸಂಬಂಧಿಸಿದಂತೆ ಸೂಕ್ತವಾದ ತೆರಿಗೆಯನ್ನು ತುಂಬುತ್ತೇನೆ ಎಂದು ಶಿವಕುಮಾರ್ ಈಗಾಗಲೆ ಲಿಖಿತವಾಗಿ ತಿಳಿಸಿದ್ದಾರೆ. ಅಷ್ಟಾಗ್ಯೂ ಅವರನ್ನು ಬಂಧಿಸುವ ಯಾವ ಔಚಿತ್ಯವೂ ಇಲ್ಲ. ಇದು ಸೇಡಿನ ರಾಜಕೀಯವಲ್ಲದೆ ಮತ್ತೇನೂ ಅಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಸರಕಾರ ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ ಸೇರಿದಂತೆ ಎಲ್ಲ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಮುಖಂಡರನ್ನು ಹಣಿಯಲು ಪ್ರಯತ್ನಿಸುತ್ತಿದೆ. ಇಂತದಕ್ಕೆಲ್ಲ ಬಗ್ಗುವ ಪ್ರಶ್ನೆಯೇ ಇಲ್ಲ. ಇದನ್ನು ಕಾಂಗ್ರೆಸ್ ಸಮರ್ಥವಾಗಿ ಎದುರಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಗುಜರಾತ್ ಶಾಸಕರನ್ನು ತಂದಿಟ್ಟುಕೊಂಡಿದ್ದಕ್ಕೆ ಹೀಗಾಗಿದೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. ಅದೇನು ಮಾಡಬಾರದ ಕೆಲಸವಲ್ಲ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕನಾಗಿ ಅದನ್ನು ಮಾಡಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ. ನಮ್ಮ ನಾಯಕರ ಬಗ್ಗೆ ನಮಗೆ ವಿಶ್ವಾಸವಿದೆ. ಅವರು ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ. ಈ ಪ್ರಕರಣದಿಂದ ಆದಷ್ಟು ಬೇಗ ಹೊರಬರಲಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News