×
Ad

ಕರಾವಳಿಯಲ್ಲಿ ಮುಂದುವರಿದ ಭಾರೀ ಮಳೆ: ಆರೆಂಜ್ ಅಲರ್ಟ್ ವಿಸ್ತರಣೆ

Update: 2019-09-04 21:32 IST

ಮಂಗಳೂರು, ಸೆ.4: ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ ಮುಂದುರಿದಿದ್ದು, ಬುಧವಾರವೂ ಭಾರೀ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಇನ್ನು ಎರಡು ದಿನಗಳವರೆಗೆ ತೀವ್ರ ಮಳೆ ಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ನಗರದಲ್ಲಿ ಬುಧವಾರ ಬೆಳಗ್ಗೆಯಿಂದಲೇ ಮೋಡ ಕವಿದಿದ್ದು, ಆಗಾಗ ಬಿರುಸಿನ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡಿನಾದ್ಯಂತ ಉತ್ತಮ ಮಳೆ ಸುರಿದಿದ್ದು, ಘಟ್ಟ ಪ್ರದೇಶದ ಚಾರ್ಮಾಡಿ ಭಾಗದಲ್ಲಿ ಮತ್ತೆ ಪ್ರವಾಹದ ಭೀತಿ ಉಂಟಾಗಿದೆ. ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಕಡಲಬ್ಬರ ಪ್ರವಾಹಿಸುತ್ತಿದೆ.

ಕರಾವಳಿಯಲ್ಲಿ ಸೋಮವಾರದಿಂದ ನಾಲ್ಕು ದಿನಗಳವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಅಲರ್ಟ್ ಗುರುವಾರದ ತನಕ ಇರಲಿದ್ದು, ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಈ ಅವಧಿಯಲ್ಲಿ ತಾಸಿಗೆ 40ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿಯೂ ಬೀಸಲಿದ್ದು, ಮೀನುಗಾರರು ಎಚ್ಚರದಿಂದ ಇರಬೇಕು ಎಂದು ಇಲಾಖೆ ಸೂಚಿಸಿದೆ. 2-3 ದಿನಗಳಿಂದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ನಿರಂತರ ಮಳೆಯಾಗಿದ್ದರಿಂದ ನೇತ್ರಾವತಿ ನದಿ ನೀರಿನ ಮಟ್ಟ ಮತ್ತೆ ಏರಿಕೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News