ಡಿಕೆಶಿ ಬಂಧನ ಖಂಡಿಸಿ ತುಮಕೂರು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ: ಕಾರ್ಯಕರ್ತರು ಪೊಲೀಸ್ ವಶಕ್ಕೆ

Update: 2019-09-04 17:28 GMT

ತುಮಕೂರು, ಸೆ.4: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಖಂಡಿಸಿ ಹಾಗೂ ಕೇಂದ್ರ ಸರ್ಕಾರದ ಧೋರಣೆಯನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದ ಸಮೀಪವಿರುವ ಭದ್ರಮ್ಮ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಮಾಜಿ ಶಾಸಕ ಡಾ. ರಫೀಕ್‍ ಅಹಮದ್ ಅವರ ನೇತೃತ್ವದಲ್ಲಿ ಜಮಾಯಿಸಿದ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. 
ರಾಷ್ಟ್ರೀಯ ಹೆದ್ದಾರಿ-206ರ ಭದ್ರಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಟೈರ್ ಗೆ ಬೆಂಕಿ ಹಚ್ಚಿ ಕೆಲ ಕಾಲ ರಸ್ತೆತಡೆ ಚಳವಳಿ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಗುಜರಾತ್‍ನ ಕಾಂಗ್ರೆಸ್ ಶಾಸಕರಿಗೆ ಕರ್ನಾಟಕದಲ್ಲಿ ಆಶ್ರಯ ಕೊಟ್ಟಿದ್ದಕ್ಕಾಗಿ ಕೇಂದ್ರ ಸರ್ಕಾರ ಐ.ಟಿ., ಈಡಿಯನ್ನು ದುರ್ಬಳಕೆ ಮಾಡಿಕೊಂಡು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಸೇಡು ತೀರಿಸಿಕೊಳ್ಳುವ ಸಲುವಾಗಿ ಅವರನ್ನು ಬಂಧಿಸಿ ಅವರ ವರ್ಚಸ್ಸಿಗೆ ಧಕ್ಕೆ ತರಲು ಹೊರಟಿದೆ ಎಂದು ಪ್ರತಿಭಟನಾಕಾರರು ದೂರಿದರು.

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಅತ್ಯಂತ ಪ್ರಭಾವಿ ನಾಯಕರಾಗಿದ್ದು, ಬಿಜೆಪಿ ತನ್ನ ಅಧಿಕಾರ ವನ್ನು ದುರ್ಬಳಕೆ ಮಾಡಿಕೊಂಡು ಅವರನ್ನು ತುಳಿಯುವ ಕೆಲಸ ಮಾಡುತ್ತಿದೆ. ಸತತ 4 ದಿನಗಳ ಕಾಲ ವಿಚಾರಣೆಗೆ ಸಹಕರಿಸಿ ದರೂ ಸಹ ಅವರು ನೀಡುತ್ತಿರುವ ಉತ್ತರ ತೃಪ್ತಿದಾಯಕವಾಗಿಲ್ಲ, ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ನೆಪವೊಡ್ಡಿ ಬಂಧಿಸಿರುವುದು ಖಂಡನೀಯ ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಣ್ಣ, ಮಾಜಿ ಶಾಸಕರಾದ ರಫೀಕ್ ಅಹ್ಮದ್, ಶಫೀ ಅಹ್ಮದ್, ಜಿ.ಪಂ.ಸದಸ್ಯ ಕೆಂಚಮಾರಯ್ಯ, ನಾರಾಯಣಮೂರ್ತಿ, ಟೂಡ ಮಾಜಿ ಅಧ್ಯಕ್ಷ ಶಿವಮೂರ್ತಿ, ಅತೀಕ್ ಅಹ್ಮದ್, ಮೆಹಬೂಬ್ ಪಾಷ, ಆಟೋ ರಾಜು, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗೀತಾ, ನಾಗಮಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪ್ರತಿಭಟನಾಕಾರರ ಬಂಧನ: ಭದ್ರಮ್ಮ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಮುಂದಾದಾರೂ, ಪ್ರತಿಭಟನೆ ಮುಂದುವರೆಸಿದ ಕೈ ಮುಖಂಡರನ್ನು ಪೊಲೀಸರು ಬಂಧಿಸಿ ವ್ಯಾನ್‍ನಲ್ಲಿ ಕರೆದೊಯ್ದರು.

ಪ್ರತಿಭಟನಾಕಾರರನ್ನು ಬಂಧಿಸುತ್ತಿದ್ದಂತೆ ಕೈ ಕಾರ್ಯಕರ್ತರು ಮತ್ತಷ್ಟು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸ್ಥಳದಲ್ಲಿ ಡಿವೈಎಸ್ಪಿ ತಿಪ್ಪೇಸ್ವಾಮಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News