​ಆದರ್ಶ ಶಿಕ್ಷಕನೊಬ್ಬ ಉತ್ತಮ ನಾಗರಿಕರನ್ನು ಸೃಷ್ಟಿಸಬಲ್ಲ: ಸಚಿವ ಕೋಟ

Update: 2019-09-05 13:45 GMT

ಉಡುಪಿ, ಸೆ.5: ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದಲ್ಲಿರುವ ಹಲವು ಸಮಸ್ಯೆಗಳ ನಡುವೆಯೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನಮ್ಮ ಮಕ್ಕಳಿಗೆ ನೀಡುವಲ್ಲಿ ಯಶಸ್ವಿಯಾಗಿದ್ದೇವೆ. ಆದರ್ಶ ಶಿಕ್ಷಕನೊಬ್ಬ ಉತ್ತಮ ನಾಗರಿಕರನ್ನು ಸೃಷ್ಟಿಸಬಲ್ಲ ಎಂದು ರಾಜ್ಯ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡ ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣಾ ಸಮಿತಿ ಉಡುಪಿ ಹಾಗೂ ಡಾ.ಜಿ.ಶಂಕರ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಇವರ ಜಂಟಿ ಸಹಯೋಗದಲ್ಲಿ ಡಾ.ಎಸ್. ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ಅಂಬಲಪಾಡಿಯ ಶ್ಯಾಮಿಲಿ ಸಭಾಂಗಣದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಶಿಕ್ಷಕರ ದಿನಾಚರಣೆ ಎಂಬುದು ಶಿಕ್ಷಕರ ಸೇವೆಯ ಸಾರ್ಥಕತೆಯನ್ನು ನೆನೆಯುವ ದಿನವಾಗಿದೆ. ಕೆಲವರಿಗೆ ಮಾತ್ರ ಸೀಮಿತವಾಗಿದ್ದ ಶಿಕ್ಷಣ, ಸ್ವಾತಂತ್ರ ದೊರೆತ ಕಳೆದ 70 ವರ್ಷಗಳಲ್ಲಿ ಎಲ್ಲಾ ವರ್ಗದವರಿಗೂ ಲಭ್ಯವಾಗಿದ್ದು, ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಆದರೆ ಮಕ್ಕಳಿಗೆ ಎಂಥಾ ಶಿಕ್ಷಣ ನೀಡಬೇಕು ಎಂಬ ಬಗ್ಗೆ ಸ್ಪಷ್ಟತೆ ಮೂಡದೇ, ಮಾತೃಭಾಷೆ, ಆಂಗ್ಲಮಾದ್ಯಮ ದಲ್ಲಿ ಶಿಕ್ಷಣ ಹೀಗೆ ಹಲವು ರೀತಿಯ ಗೊಂದಲಗಳು ಸೃಷ್ಟಿಯಾಗಿವೆ. ಈ ಎಲ್ಲದರ ನಡುವೆಯೂ ಜಿಲ್ಲೆಯಲ್ಲಿ ಶಿಕ್ಷಣದ ಗುಣಮಟ್ಟವನ್ನು ಕಾಯ್ದುಕೊಂಡಿದ್ದೇವೆ. ಹೀಗಾಗಿ ಶಿಕ್ಷಕರ ಸಮಸ್ಯೆ ಹಾಗೂ ಶಿಕ್ಷಣದ ಸಮಸ್ಯೆಯನ್ನು ನಾವು ಪ್ರತ್ಯೇಕವಾಗಿ ನೋಡಬೇಕಾಗಿದೆ ಎಂದು ಕೋಟ ಹೇಳಿದರು.

ರಾಜ್ಯದಲ್ಲಿ 48,000 ಸರಕಾರಿ ಶಾಲೆಗಳಿವೆ. ಒಂದು ಕೋಟಿಗೂ ಅಧಿಕ ವಿದ್ಯಾರ್ಥಿಗಳು ಇದರಲ್ಲಿ ಕಲಿಯುತ್ತಿದ್ದಾರೆ. 2.5 ಲಕ್ಷ ಶಿಕ್ಷಕರು ಮಕ್ಕಳಿಗೆ ಕಲಿಸುತ್ತಿದ್ದಾರೆ. ಗೃಹ ಇಲಾಖೆಯ ಬಳಿಕ ಅತ್ಯಧಿಕ ಅನುದಾನ ಶಿಕ್ಷಣ ಕ್ಷೇತ್ರಕ್ಕೆ ಸಿಗುತ್ತಿದೆ. ಆದರೂ ಇನ್ನೂ 10000 ಸರಕಾರಿ ಶಾಲೆಗಳಿಗೆ ಸುಸಜ್ಜಿತ ಶೌಚಾಲಯಗಳಿಲ್ಲ. 6500 ಶಾಲೆಗಳಿಗೆ ಸರಿಯಾದ ಕಟ್ಟಡಗಳಿಲ್ಲ. ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದರು.

ಸ್ವತಹ ಶಿಕ್ಷಕನಾಗಿ ಕೆಲಕಾಲ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಜಿಲ್ಲಾಧಿಕಾರಿ ಜಿ. ಜಗದೀಶ್ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ, ತಾಲೂಕು ಮಟ್ಟದ ಶಿಕ್ಷಕರ ಪ್ರತಿನಿಧಿಯಾಗಿ ಶಿಕ್ಷಕರ ಸಮಸ್ಯೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ಶಿಕ್ಷಕ ವೃತ್ತಿಯನ್ನು ಪ್ರೀತಿಸುವವರು, ವಿದ್ಯಾರ್ಥಿಗಳನ್ನು ತನ್ನ ಮಕ್ಕಳಿಗಿಂತ ಹೆಚ್ಚು ಪ್ರೀತಿಸಲು ಸಾಧ್ಯವಿರುವವರು ಹಾಗೂ ಪ್ರಪಂಚದ ಆಗು ಹೋಗುಗಳನ್ನು ನಿರಂತರವಾಗಿ ಅಧ್ಯಯನ ಮಾಡುವ ಅಭ್ಯಾಸ ಹೊಂದಿರುವವರು ಉತ್ತಮ ಶಿಕ್ಷಕರಾಗಲು ಸಾಧ್ಯ ಎಂದರು.

ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧ್ಯಕ್ಷ ದಿನಕರಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಅವರು ಶಿಕ್ಷಕರನ್ನುದ್ದೇಶಿಸಿ ಮಾತನಾಡಿದರು. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಅಧ್ಯಕ್ಷ ಡಾ.ಜಿ.ಶಂಕರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಲ್ಲದೇ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರನ್ನು ಸಹ ಗೌರವಿಸಲಾಯಿತು. ನಿವೃತ್ತ ಶಾಲಾ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಕಾಪು ಶಾಸಕ ಲಾಲಾಜಿ ಮೆಂಡನ್, ತಾಪಂ ಅಧ್ಯಕ್ಷೆ ನೀತಾ ಗುರುರಾಜ್ ಪೂಜಾರಿ, ಜಿಪಂ ಸದಸ್ಯೆ ಶಿಲ್ಪ ಸುವರ್ಣ, ಡಯಟ್ ಸಂಸ್ಥೆಯ ಪ್ರಾಂಶುಪಾಲ ಚಂದ್ರಶೇಖರ್, ಜಿಲ್ಲೆಯ ವಿವಿಧ ಶಿಕ್ಷಕರ ಸಂಘಗಳ ಅಧ್ಯಕ್ಷರಾದ ರವೀಂದ್ರ ಹೆಗ್ಡೆ, ಕಿರಣ್ ಹೆಗ್ಡೆ, ಚಂದ್ರಶೇಖರ್ ಶೆಟ್ಟಿ, ಮಂಗಳ, ಜ್ಯೋತಿ, ಅರುಣ್ ಕುಮಾರ್ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧ ಶಾಲೆಗಳ ಶಿಕ್ಷಕರಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಲೆವೂರು ಶಾಂತಿ ನಿಕೇತನ ಶಾಲಾ ಮುಖ್ಯೋಪಾಧ್ಯಾಯಿನಿ ರೂಪಾ ಡಿ.ಕಿಣಿ ನಡೆಸಿಕೊಟ್ಟರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ ಸ್ವಾಗತಿಸಿದರು.ಉದ್ಯಾವರ ಸರಕಾರಿ ಪ್ರೌಢ ಶಾಲೆಯ ಪಂಚಾಕ್ಷರಿ ಎ, ಮಣಿಪುರ ನಾಗರಾಜ್ ಮೊಗೇರ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News