ಡಿಕೆಶಿ ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ: ಮೋದಿ-ಅಮಿತ್ ಶಾ ಪ್ರತಿಕೃತಿ ದಹನ

Update: 2019-09-05 17:20 GMT

ಬೆಂಗಳೂರು, ಸೆ.5: ಬಿಜೆಪಿ ವಿರುದ್ಧ ದ್ವನಿ ಎತ್ತುವವರನ್ನು ಮಟ್ಟಹಾಕುವುದಕ್ಕಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ರನ್ನು ಈಡಿ(ಜಾರಿ ನಿರ್ದೇಶನಾಲಯ) ಮೂಲಕ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಖಂಡಿಸಿ ಬ್ಯಾಟರಾಯನಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯ ಸಾದಹಳ್ಳಿ ಗೇಟ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಪ್ರತಿಕೃತಿ ದಹಿಸಿ, ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

2017ರಲ್ಲಿ ಗುಜರಾತ್ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲು ಡಿ.ಕೆ.ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್ ಬಹುಮತದಿಂದ ಅಧಿಕಾರಕ್ಕೆ ಬರಲು ಪಕ್ಷ ಸಂಘಟನೆ ಮಾಡಿದ್ದರು. ಬಿಜೆಪಿ ಸಮ್ಮಿಶ್ರ ಸರಕಾರ ಪತನಗೊಳಿಸಲು ಆಪರೇಷನ್ ಕಮಲ ಮಾಡಲು ಮುಂದಾದಾಗ ಡಿಕೆಶಿ ಬಂಡೆಯಂತೆ ನಿಂತಿದ್ದರು. ಹೀಗಾಗಿ ಈಡಿಯನ್ನು ಬಳಸಿಕೊಂಡಿರುವ ಬಿಜೆಪಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ರನ್ನು ಬಂಧಿಸಿದೆ ಎಂದು ಬ್ಯಾಟರಾಯನಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಗೋಪಾಲಗೌಡ ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಅಭಿಮಾನಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News