ಬದುಕಿನ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವವರೇ ನಿಜವಾದ ಗುರು: ಸಚಿವ ಜೆ.ಸಿ.ಮಾಧುಸ್ವಾಮಿ

Update: 2019-09-05 17:37 GMT

ತುಮಕೂರು, ಸೆ.5: ವಿದ್ಯಾರ್ಥಿಗಳಿಗೆ ಅಕ್ಷರದೊಂದಿಗೆ ಬದುಕಿನ ಮೌಲ್ಯಗಳ ಬಗ್ಗೆ ಅರಿವನ್ನು ಮೂಡಿಸುವವರೇ ನಿಜವಾದ ಗುರು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ನಗರದ ಅಮಾನಿಕೆರೆಯ ಗಾಜಿನಮನೆಯಲ್ಲಿ ಏರ್ಪಡಿಸಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 132ನೇ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಣಕ್ಕೆ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಶಕ್ತಿ ಇದೆ. ಶಿಕ್ಷಕನಿಗೂ ವಿದ್ಯಾರ್ಥಿಗೂ ಅವಿನಾಭಾವ ಸಂಬಂಧವಿದೆ. ಮಕ್ಕಳು ಹಿರಿಯರ ಹಾಗೂ ಶಿಕ್ಷಕರ ನಡೆ-ನುಡಿಗಳನ್ನು ಅನುಸರಿಸುವ ಮನೋಭಾವ ಹೊಂದಿರುತ್ತಾರೆ. ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಿಗೆ ಬುದ್ಧಿ ಹೇಳುವ ನೈತಿಕತೆಯನ್ನು ಬೆಳೆಸಿಕೊಳ್ಳಬೇಕು.

ಮಗು ತನ್ನ ಜಗತ್ತಿನಲ್ಲಿ ಶಿಕ್ಷಕನೇ 'ಸೂಪರ್ ಮ್ಯಾನ್'. ಗುರುವಿಗೆ ತಿಳಿಯದಿರುವ ವಿಷಯವೇ ಇಲ್ಲ ಎಂದು ಭಾವಿಸಿಕೊಂಡಿರುತ್ತದೆ. ಪ್ರತಿ ಮಗುವಿನ ಉತ್ತಮ ಭವಿಷ್ಯದ ಜೀವನವನ್ನು ರೂಪಿಸುವ ಶಕ್ತಿ ಶಿಕ್ಷಕರಿಗೆ ಮಾತ್ರ ಇರುತ್ತದೆ. ಅರ್ಥಪೂರ್ಣ ಪ್ರಜೆಯನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕೆಂದರೆ ಪ್ರಶ್ನೆ ಕೇಳುವ ಮನೋಭಾವ ಬೆಳೆಸಿಕೊಳ್ಳುವಂತೆ ಹಾಗೂ ಪರೀಕ್ಷೆ ಸಮಯದಲ್ಲಿ ಪ್ರಶ್ನೆಯನ್ನು ಅರ್ಥ ಮಾಡಿಕೊಂಡು ಉತ್ತರ ಬರೆಯುವಂತೆ ಮಕ್ಕಳನ್ನು ಸಿದ್ಧಪಡಿಸಬೇಕು ಎಂದು ತಿಳಿಸಿದರು.

ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಸಾಹಿತ್ಯ ಸೇರಿದಂತೆ ಹಲವಾರು ಆಸಕ್ತ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಪೋಷಕರು ಪ್ರೋತ್ಸಾಹಿಸಬೇಕು. ಶಾಲೆಗಳಲ್ಲಿ ನಾಡಗೀತೆ ಹಾಡುವಾಗ 'ಜೈ ಭಾರತ ಜನನಿಯ ತನುಜಾತೆ' ಬದಲು 'ಜಯ ಭಾರತ ಜನನಿಯ ತನುಜಾತೆ' ಎಂದು ಹೇಳಬೇಕು. ನಾವು ಸದಾ ಜಯವನ್ನೇ ಎತ್ತಿ ಹಿಡಿಯಬೇಕು ಎಂದು ತಿಳಿಸಿದರು. ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರಲ್ಲದೇ ತಮ್ಮ ಶಾಲಾ ಜೀವನದ ಶಿಕ್ಷಕರನ್ನು ಸ್ಮರಿಸಿದರು.

ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ಶಿಕ್ಷಣ ಎಂಬುದು ಸಾರ್ವತ್ರಿಕ ಹಾಗೂ ನಿರಂತರ ಪ್ರಕ್ರಿಯೆ. ಶಿಕ್ಷಕರು ರಾಷ್ಟ್ರ ಕಟ್ಟುವ ಕೆಲಸ ಮಾಡಬೇಕು.   ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ಮಕ್ಕಳು ಉತ್ತಮ ಪ್ರಜೆಯಾಗಿ ರೂಪುಗೊಳ್ಳುತ್ತಾರೆ. ಮಕ್ಕಳು ಏನೇ ತಪ್ಪು ಮಾಡಿದರೂ ಅದನ್ನು ತಿದ್ದುವ ಮನಸ್ಸು ಶಿಕ್ಷಕರಿಗಿರಬೇಕು ಎಂದು ತಿಳಿಸಿದರು.

ಶಾಸಕ ಜ್ಯೋತಿಗಣೇಶ್ ಮಾತನಾಡಿ ನಮ್ಮ ಜೀವನದಲ್ಲಿ ಪ್ರಾಥಮಿಕ ಶಿಕ್ಷಣ ಮಟ್ಟದ ಶಿಕ್ಷಕರನ್ನು ಮರೆಯಲು ಸಾಧ್ಯವಿಲ್ಲ. ಗುಡಿಯಲ್ಲಿ ದೇವರಿದ್ದಂತೆ, ಶಾಲೆಯಲ್ಲಿ ಶಿಕ್ಷಕರಿರುತ್ತಾರೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಅಳವಡಿಸಿಕೊಳ್ಳಬೇಕು. ಜಿಲ್ಲೆಯ ಶಿಕ್ಷಕರ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಪರಿಹರಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಜಿಲ್ಲಾಧಿಕಾರಿ ಡಾ.ರಾಕೇಶ್‍ ಕುಮಾರ್ ಅವರು ಮಾತನಾಡಿ, ವಿದ್ಯಾರ್ಥಿಗಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವಲ್ಲಿ ಗುರು ಮಹತ್ವದ ಪಾತ್ರ ವಹಿಸುತ್ತಾನೆ. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯನ್ನೇ ನಾವಿಂದು ಶಿಕ್ಷಕರ ದಿನಾಚರಣೆಯಾಗಿ ಆಚರಿಸುತ್ತಿದ್ದೇವೆ. ಮಕ್ಕಳು ಮನೆಗಿಂತ ಹೆಚ್ಚು ಶಾಲೆಯಲ್ಲಿ ಸಮಯ ಕಳೆಯುತ್ತಾರೆ. ಮಕ್ಕಳು ಶಿಕ್ಷಕರ ಹವ್ಯಾಸ, ಶೈಲಿ, ವ್ಯಕ್ತಿತ್ವವನ್ನು ನೋಡಿ ಕಲಿಯುತ್ತಾರೆ. ಆದ್ದರಿಂದ ಮಕ್ಕಳನ್ನು ಉತ್ತಮ ಪ್ರಜೆಯಾಗಿಸಲು ಶಿಕ್ಷಕರು ಪ್ರಯತ್ನಿಸಬೇಕು. ಮಕ್ಕಳಿಗೆ ಪಾಠ ಮಾಡುವಾಗ ಪೌರಾಣಿಕ ಕಥೆಗಳ ಸನ್ನಿವೇಶಗಳನ್ನು ವಿವರಿಸಿ ಎಂದು ಶಿಕ್ಷಕರಿಗೆ ಸಲಹೆ ನೀಡಿದ ಅವರು, ಬಾಲ್ಯದಿಂದ ಉನ್ನತ ಶಿಕ್ಷಣದವರೆಗೂ ಶಿಕ್ಷಕರ ಪಾತ್ರ ಮಹತ್ವವಾದುದು ಎಂದು ತಮ್ಮ ಶಿಕ್ಷಕರನ್ನು ನೆನೆದರು.

ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಿವೃತ್ತ ಪ್ರಾಧ್ಯಾಪಕ ಹೆಚ್.ವಿ.ವೀರಭದ್ರಯ್ಯ ಅವರು ಉಪನ್ಯಾಸ ನೀಡಿದರು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಡಾ.ನವ್ಯಬಾಬು, ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನವಂಶಿಕೃಷ್ಣ, ಜಿ.ಪಂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲಲಿತ ಕುಮಾರಿ, ಡಿಡಿಪಿಐ ಎಂ.ಆರ್.ಕಾಮಾಕ್ಷಿ, ಬಿಇಒ ರಂಗಧಾಮಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನರಸಿಂಹರಾಜು, ಹಾಲನೂರು ಎಸ್.ಲೇಪಾಕ್ಷ್ ಸೇರಿದಂತೆ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News