ಶೆಹ್ಲಾ ರಶೀದ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

Update: 2019-09-06 14:16 GMT

ಹೊಸದಿಲ್ಲಿ, ಸೆ. 4: ಸಾಮಾಜಿಕ ಹೋರಾಟಗಾರ್ತಿ, ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆಯ ಮಾಜಿ ಉಪಾಧ್ಯಕ್ಷೆ ಶೆಹ್ಲಾ ರಶೀದ್ ವಿರುದ್ಧ ದಿಲ್ಲಿ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ.

ಜಮ್ಮು ಹಾಗೂ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಧಿ 370ನ್ನು ಕೇಂದ್ರ ಸರಕಾರ ರದ್ದುಗೊಳಿಸಿದ ಬಳಿಕ ಕಾಶ್ಮೀರದ ಪರಿಸ್ಥಿತಿ ಬಗ್ಗೆ ಶೆಹ್ಲಾ ರಶೀದ್ ತಪ್ಪು ಮಾಹಿತಿ ರವಾನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸುಪ್ರೀಂ ಕೋರ್ಟ್‌ನ ವಕೀಲ ಅಲೋಕ್ ಶ್ರೀವಾತ್ಸವ್ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ಶೆಹ್ಲಾ ರಶೀದ್ ವಿರುದ್ಧ ಎಫ್‌ಐಆರ್ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆಗಸ್ಟ್ 18 ಹಾಗೂ ಅದರ ಹಿಂದಿನ ಹಾಗೂ ಮುಂದಿನ ದಿನಗಳಲ್ಲಿ ಮಾಡಿದ ಟ್ವೀಟ್‌ಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೇನೆ ಹಾಗೂ ಭಾರತ ಸರಕಾರದ ವಿರುದ್ಧ ನಕಲಿ ಸುದ್ದಿಗಳನ್ನು ಹರಡುತ್ತಿರುವ ಆರೋಪದಲ್ಲಿ ಶೆಹ್ಲಾ ರಶೀದ್ ಅವರನ್ನು ಬಂಧಿಸಬೇಕು ಎಂದು ಶ್ರೀವಾತ್ಸವ್ ದೂರಿನಲ್ಲಿ ಆಗ್ರಹಿಸಿದ್ದರು.

ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ಘಟಕಕ್ಕೆ ವರ್ಗಾಯಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News