ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ಧ: ಬಿ.ಎಸ್.ಯಡಿಯೂರಪ್ಪ

Update: 2019-09-06 15:02 GMT

ಬೆಂಗಳೂರು, ಸೆ.6: ಬೆಂಗಳೂರು ನಗರವನ್ನು ಸ್ವಚ್ಛವಾಗಿಡುವುದು ಸರಕಾರದ ಆದ್ಯತೆಯಾಗಿದ್ದು, ಕಸ ವಿಲೇವಾರಿಗೆ ಅಗತ್ಯವಿರುವ ಪೌರ ಕಾರ್ಮಿಕರನ್ನು ನೇಮಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ರಸ್ತೆ, ಉದ್ಯಾನವನಗಳು ಸ್ವಚ್ಛವಾಗಿಡಲು 24 ಗಂಟೆಗಳ ಕಾಲ ಕೆಲಸ ಮಾಡಲು ಪೌರಕಾರ್ಮಿಕರನ್ನು ನೇಮಿಸುವ ಅಗತ್ಯವಿದೆ ಎಂದರು.

ರಸ್ತೆಗಳಲ್ಲಿರುವ ಗುಂಡಿಗಳನ್ನು ಕೂಡಲೇ ಮುಚ್ಚಲು ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳನ್ನು ಒಳಗೊಂಡ ಸ್ಥಳೀಯ ಸಮಿತಿ ರಚಿಸಿ, ಮಾಸಿಕ ಸಭೆ ಮಾಡಬೇಕು. ಈ ಸಭೆಯಲ್ಲಿ ಆಯಾ ಪ್ರದೇಶದ ಅಭಿವೃದ್ಧಿ ಕುರಿತು ಚರ್ಚಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಎಂಟು ವಲಯಗಳಿಗೆ ನಾಲ್ಕು ವಿಶೇಷ ಆಯುಕ್ತರನ್ನು ಹೆಚ್ಚಿನ ಅಧಿಕಾರ ನೀಡಿ ನೇಮಿಸುವ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸೂಚಿಸಿದರು.

ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಪರಿಹಾರಗಳನ್ನು ಒದಗಿಸಲು ಬೆಂಗಳೂರು ಸಹಾಯವಾಣಿ ಸ್ಥಾಪನೆ ಹಾಗೂ ಕಸ ವಿಲೇವಾರಿಗೆ ಪರಿಹಾರವಾಗಿ ಬೆಂಗಳೂರಿನಲ್ಲಿ ಘನತ್ಯಾಜ್ಯ ಘಟಕಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳುವಂತೆ ಯಡಿಯೂರಪ್ಪ ಹೇಳಿದರು.

ಬೆಂಗಳೂರಿನ ಎಂಟು ವಲಯಗಳಲ್ಲಿ ನಡೆಯಬೇಕಾಗಿರುವ ಕಾಮಗಾರಿಗಳು, ಮೇಲ್ವಿಚಾರಕರ ನೇಮಕ. ಕಸ ವಿಲೇವಾರಿ, ಸಂಸ್ಕರಣೆ ಮತ್ತು ರೈತರಿಗೆ ಕಡಿಮೆ ದರದಲ್ಲಿ ರಸಗೊಬ್ಬರ ಸರಬರಾಜು ಮಾಡುವ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥನಾರಾಯಣ್ ತಿಳಿಸಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿ ಪ್ರಾರಂಭಿಸುವುದು, ಪ್ರತಿ ವಾರ್ಡ್‌ನ ಅಧಿಕಾರಿಗಳು ಜನಸ್ಪಂದನಾ ಸಭೆಗಳನ್ನು ನಡೆಸುವ ಕುರಿತು ಚರ್ಚಿಸಲಾಗಿದೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಆದ್ಯತೆ ಮೇರೆಗೆ ಪ್ರಮುಖ ಕಾರ್ಯಯೋಜನೆಗಳನ್ನು ರೂಪಿಸಲು ನಿರ್ಧರಿಸಲಾಗಿದೆ ಎಂದರು.

ಮುಂದಿನ 15 ದಿನಗಳಲ್ಲಿ ಬೆಂಗಳೂರು ನಗರದ ಎಲ್ಲ ಶಾಸಕರನ್ನು ಜೊತೆಗೂಡಿಸಿಕೊಂಡು ಈ ಹಲವು ವಿಚಾರಗಳ ಕುರಿತು ಸಮಾಲೋಚನೆ ನಡೆಸಲಾಗುವುದು ಎಂದು ಅಶ್ವಥನಾರಾಯಣ್ ತಿಳಿಸಿದರು.

ಸಭೆಯಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಸಂಸದ ಪಿ.ಸಿ. ಮೋಹನ್, ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಮತ್ತು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಕಾರ್ಯದರ್ಶಿ ಶಿವಯೋಗಿ ಕಳಸದ್ ಹಾಗು ಸಲಹೆಗಾರರ ಎಂ.ಲಕ್ಷ್ಮಿ ನಾರಾಯಣ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News