ಹುಬ್ಬಳ್ಳಿ-ಧಾರವಾಡ: ರಸ್ತೆ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲು ಡಿಸಿಎಂ ಕಾರಜೋಳ ಸೂಚನೆ

Update: 2019-09-06 17:33 GMT

ಬೆಂಗಳೂರು. ಸೆ.6: ಹುಬ್ಬಳ್ಳಿಯು ಉತ್ತರ ಕರ್ನಾಟಕದ ಪ್ರಮುಖ ನಗರವಾಗಿದ್ದು, ಆದ್ಯತೆಯ ಮೇರೆಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಇಂದಿಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಹುಬ್ಬಳ್ಳಿ-ಧಾರವಾಡ ಬೈಪಾಸ್ ಮತ್ತು ಹುಬ್ಬಳ್ಳಿ ಧಾರವಾಡ ವೃತ್ತದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು. ನವಲಗುಂದ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದರು.

ಅತಿವೃಷ್ಟಿಯಿಂದ 8 ಸಾವಿರ ಕೋಟಿ ರೂ.ವೆಚ್ಚದ ರಸ್ತೆಗಳು ಹಾನಿಗೊಳಗಾಗಿವೆ. 2,600 ಕೋಟಿ ರೂ.ಬಿಲ್ಲುಗಳ ಬಾಕಿ ಇವೆ. ಸಿಆರ್‌ಎಫ್ ಯೋಜನೆಯಡಿಯಲ್ಲೂ 600 ಕೋಟಿ ರೂ.ಬಿಲ್ಲುಗಳು ಬಾಕಿ ಇವೆ. ಆದ್ಯತೆಯ ಮೇರೆಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು. ಮುದೋಳ್ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು ನಗರ ಸಾರಿಗೆ ನಿರ್ದೇಶನಾಲಯದಿಂದ 5 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹುಬ್ಬಳ್ಳಿ-ಧಾರವಾಡ ನಗರ ವ್ಯಾಪ್ತಿಯ 315 ಕೋಟಿ ರೂ. ವೆಚ್ಚದ ರೈಲುನಿಲ್ದಾಣದಿಂದ ವಿಮಾನ ನಿಲ್ದಾಣ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು.

ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯಲ್ಲಿ ಈಗಾಗಲೇ ಮೊದಲ ಹಂತದಲ್ಲಿ ಅನುಷ್ಟಾನಗೊಳಿಸುತ್ತಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿ ಹಿರಿಯ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News