ಪ್ರವಾಹ: ಸಮೀಕ್ಷೆ ಬಳಿಕ ಶಾಶ್ವತ ಪರಿಹಾರ- ಸಚಿವ ಕೆ.ಎಸ್.ಈಶ್ವರಪ್ಪ

Update: 2019-09-07 13:15 GMT

ಬೆಳಗಾವಿ, ಸೆ.7: ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಸಂಪೂರ್ಣ ಸಮೀಕ್ಷೆಯಾದ ತಕ್ಷಣವೇ ಮನೆ ನಿರ್ಮಾಣ ಸೇರಿದಂತೆ ಶಾಶ್ವತ ಪರಿಹಾರವನ್ನು ಒದಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಶನಿವಾರ ಜಿಲ್ಲೆಯ ಪ್ರವಾಹ ಬಾಧಿತ ಸ್ಥಳಗಳಿಗೆ ಭೇಟಿ ನೀಡಿದ ಅವರು, ಚಿಕ್ಕೋಡಿ ತಾಲೂಕಿನ ಮಾಂಜರಿ ಸೇತುವೆಯ ಬಳಿ ಕುಡಿಯುವ ನೀರು ಸರಬರಾಜು ಯೋಜನೆ ಹಾಗೂ ನದಿ ಪಾತ್ರದಲ್ಲಿ ಬೆಳೆಹಾನಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಯಾವುದೇ ದಾಖಲಾತಿಗಳನ್ನು ಕೇಳದೆ ಪ್ರವಾಹ ಬಾಧಿತ ಎಲ್ಲ ಕುಟುಂಬಗಳಿಗೂ ಹತ್ತು ಸಾವಿರ ರೂಪಾಯಿ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಮನೆಗಳು ಕುಸಿದಿರುವ ಬಗ್ಗೆ ಅಧಿಕಾರಿಗಳು ಸಮೀಕ್ಷೆ ನಡೆಸುತ್ತಿದ್ದಾರೆ. ಸಮೀಕ್ಷೆಯ ವರದಿ ಆಧರಿಸಿ ಸಂತ್ರಸ್ತ ಕುಟುಂಬಗಳಿಗೆ ಮನೆ ನಿರ್ಮಾಣ ಸೇರಿದಂತೆ ಶಾಶ್ವತ ಪರಿಹಾರ ಕಲ್ಪಿಸುವ ಬಗ್ಗೆ ಸರಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಹದಿನೈದು ದಿನಗಳಲ್ಲಿ ಸಂಪೂರ್ಣ ವರದಿ ನೀಡಲು ಜಿಲ್ಲಾ ಪಂಚಾಯತ್ ಸಿಇಓಗಳಿಗೆ ಸೂಚನೆ ನೀಡಲಾಗಿದೆ. ಮಾಹಿತಿಯನ್ನು ಪಡೆದುಕೊಂಡ ಬಳಿಕ ಸಮರ್ಪಕ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಈಶ್ವರಪ್ಪ ತಿಳಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಪ್ರವಾಹದಿಂದ ಉಂಟಾಗಿರುವ ಹಾನಿಯ ಬಗ್ಗೆ ವಿವರಿಸಿದರು. ಬೆಳೆಹಾನಿಯಿಂದ ರೈತರು ಸಂಕಷ್ಟದಲ್ಲಿದ್ದು, ಅವರಿಗೆ ತಕ್ಷಣ ಪರಿಹಾರ ಒದಗಿಸುವ ಅಗತ್ಯವಿದೆ. ಅದೇ ರೀತಿ ಪ್ರತಿವರ್ಷ ಪ್ರವಾಹದಿಂದ ತತ್ತರಿಸುತ್ತಿರುವ ಗ್ರಾಮಗಳಿಗೆ ಶಾಶ್ವತ ಯೋಜನೆಯನ್ನು ರೂಪಿಸಲು ಕ್ರಮಕೈಗೊಳ್ಳಬೇಕಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.

ಮಾಂಜರಿ ಗ್ರಾಮದ ಅಂಬೇಡ್ಕರ್ ಕಾಲನಿ ಮತ್ತಿತರ ಪ್ರದೇಶಗಳಲ್ಲಿ ಸಂಚರಿಸಿದ ಈಶ್ವರಪ್ಪಅಲ್ಲಿನ ಜನರ ಅಹವಾಲುಗಳನ್ನು ಆಲಿಸಿದರು. ಮನೆಗಳು ಸಂಪೂರ್ಣವಾಗಿ ಶಿಥಿಲಗೊಂಡಿರುವುದರಿಂದ ಕೂಡಲೇ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದರು. ಸರಕಾರಕ್ಕೆ ಪರಿಸ್ಥಿತಿಯ ಸಂಪೂರ್ಣ ಅರಿವು ಇದ್ದು, ಸಮೀಕ್ಷೆ ಮುಗಿದ ಬಳಿಕ ಮನೆ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಈಶ್ವರಪ್ಪ ಭರವಸೆ ನೀಡಿದರು.

ಸುವರ್ಣ ವಿಧಾನಸೌಧದಲ್ಲಿ ರಾಜ್ಯಮಟ್ಟದ ಸಭೆ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೆ.8 ಹಾಗೂ 9ರಂದು ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿ ಸಿಇಓ ಗಳು, ಜಿಪಂ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸ್ಥಾಯಿ ಸಮಿತಿಯ ಸದಸ್ಯರ ಸಭೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಈಶ್ವರಪ್ಪತಿಳಿಸಿದರು.

ಎರಡು ದಿನಗಳ ರಾಜ್ಯಮಟ್ಟದ ಸಭೆಯಲ್ಲಿ ಕೂಡ ಪ್ರವಾಹ ಬಾಧಿತ ಕುಟುಂಬಗಳಿಗೆ ಮನೆ ನಿರ್ಮಾಣ, ಶುದ್ಧ ಕುಡಿಯುವ ನೀರು ಒದಗಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಆವರು ಹೇಳಿದರು.

ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಚಿಕ್ಕೋಡಿ-ಸದಲಗಾ ಶಾಸಕ ಗಣ್ಣೇಶ್ ಹುಕ್ಕೇರಿ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಆಶಾ ಐಹೊಳೆ ಉಪಸ್ಥಿತರಿದ್ದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತ ಡಾ.ಆರ್.ವಿಶಾಲ್, ಕುಡಿಯುವ ನೀರು ಸರಬರಾಜು ಯೋಜನೆಗಳ ಕುರಿತು ಸಚಿವರಿಗೆ ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News