ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

Update: 2019-09-07 13:06 GMT

ಬೆಂಗಳೂರು, ಸೆ.7: ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಬೆನ್ನಟ್ಟಿದ್ದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈದಿರುವ ಘಟನೆ ಇಲ್ಲಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಕೆಬ್ಬೆಹಳ್ಳದ ಮಹೇಶ್‌ ಕುಮಾರ್(35) ಕೊಲೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

ಶುಕ್ರವಾರ ರಾತ್ರಿ ಕೆಲಸ ಮುಗಿಸಿಕೊಂಡು ರಾಜಗೋಪಾಲನಗರದಲ್ಲಿ ಕ್ಯಾಂಟರ್ ನಿಲ್ಲಿಸಿ ಮನೆಗೆ ಹೊಂಡಾ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯೆ ಬೈಕ್‌ಗಳಲ್ಲಿ ನಾಲ್ವರು ದುಷ್ಕರ್ಮಿಗಳು ಹಿಂಬಾಲಿಸಿಕೊಂಡು ಬಂದು ಉದ್ದೇಶಪೂರ್ವಕವಾಗಿಯೇ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ ಎಂದು ಹೇಳಲಾಗುತ್ತಿದೆ.

ಕೊಲೆಯಾದ ಮಹೇಶ್‌ಕುಮಾರ್ 6 ವರ್ಷಗಳ ಹಿಂದೆ ಕೊಲೆ ಕೃತ್ಯವೊಂದರಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ ಬಿಡುಗಡೆಯಾಗಿ ಬಂದಿದ್ದು, ಅಲ್ಲಿಂದ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದೇ ಕ್ಯಾಂಟರ್ ಚಾಲಕನಾಗಿ ಜೀವನ ನಡೆಸುತ್ತಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಮಹೇಶ್‌ ಕುಮಾರ್ ಅವರನ್ನು ಕೊಲೆಗೈದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನೆ ಬಳಿಕ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ದುಷ್ಕರ್ಮಿಗಳ ಪತ್ತೆಗೆ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News