×
Ad

ಹೋಟೆಲ್ ಉದ್ಯಮದ ನೆರವಿಗೆ ಸರಕಾರ ಬದ್ಧ: ಮುಖ್ಯಮಂತ್ರಿ ಯಡಿಯೂರಪ್ಪ

Update: 2019-09-08 20:45 IST

ಬೆಂಗಳೂರು, ಸೆ.8: ಬಂಟರ ಸಮುದಾಯ ನಡೆಸುವ ಹೋಟೆಲ್ ಉದ್ಯಮಕ್ಕೆ ಹೆಚ್ಚಿನ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ರವಿವಾರ ಬೆಂಗಳೂರು ಬಂಟರ ಹೋಟೆಲ್ ಮಾಲಕರ ಸಂಘ ನಗರದ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾ ಭವನದಲ್ಲಿ ಆಯೋಜಿಸಿದ್ದ ಬಂಟ ಹೋಟಲಿಗರ ಪ್ರಥಮ ಸಮ್ಮಿಲನ ’ಬಂಟರಾತಿಥ್ಯ’ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹೋಟೆಲ್ ಉದ್ಯಮದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಸಲು ಅವಕಾಶವಿದೆ. ಇದನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿರುವ ಬಂಟರ ಸಮುದಾಯ, ಹೋಟೆಲ್ ಉದ್ಯಮದಲ್ಲಿ ಸಾವಿರಾರು ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ಯಶಸ್ವಿಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಬಂಟರ ಸಮುದಾಯ ಕೇವಲ ಹೋಟೆಲ್ ಉದ್ಯಮ ಮಾತ್ರವಲ್ಲ, ಶಿಕ್ಷಣ ಕ್ಷೇತ್ರ, ಬ್ಯಾಂಕಿಂಗ್ ಕ್ಷೇತ್ರದಲ್ಲೂ ಮೇಲುಗೈ ಸಾಧಿಸಿದೆ. ಹೀಗೆ ದೇಶ, ವಿದೇಶಗಳಲ್ಲಿ ಮತ್ತಷ್ಟು ಸಾಧನೆ ಮಾಡಲಿ. ಇದಕ್ಕೆ ಅಗತ್ಯವಾದ ನೆರವು ನೀಡಲು ಸರಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಮಾತನಾಡಿ, ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆ ಜಾರಿಯಾದ ಪರಿಣಾಮ ಬಂಟರ ಸಮುದಾಯ ಉದ್ಯೋಗವನ್ನರಿಸಿ ಬೆಂಗಳೂರು, ಮುಂಬೈ ಸೇರಿದಂತೆ ದೇಶ-ವಿದೇಶಗಳಲ್ಲಿ ಹರಡಿಕೊಂಡು ಯಶಸ್ವಿ ಉದ್ಯಮಿಗಳಾಗಿ ಬೆಳೆಯಲು ಸಾಧ್ಯವಾಯಿತು ಎಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯ ಕೆ.ಉಮೇಶ್ ಶೆಟ್ಟಿ, ಹೋಟೆಲ್ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಡಾ.ಬೇಳೂರು ರಾಘವೇಂದ್ರ ಶೆಟ್ಟಿಯನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಅಶ್ವಥ್ ನಾರಾಯಣ, ಎಂಆರ್ ಜಿ ಗ್ರೂಪ್ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ, ಬೆಂಗಳೂರು ಬಂಟರ ಹೋಟೆಲ್ ಮಾಲಕರ ಸಂಘದ ಗೌರವಾಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಅಧ್ಯಕ್ಷ ಮಧುಕರ ಶೆಟ್ಟಿ, ಜಿ.ಕೆ.ಶೆಟ್ಟಿ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News