ಕೇಂದ್ರದಿಂದ ಪರಿಹಾರ ಸಿಗಲು ಸ್ವಲ್ಪ ಸಮಯಬೇಕು: ಯಡಿಯೂರಪ್ಪ

Update: 2019-09-10 14:17 GMT

ಬೆಳಗಾವಿ, ಸೆ.10: ಪ್ರವಾಹದಿಂದ ಆದ ಬೆಳೆನಾಶಕ್ಕೆ ಹೆಚ್ಚಿನ ಪರಿಹಾರ ಕೊಡಲು ಸರಕಾರ ಬದ್ಧವಾಗಿದ್ದು, ಈ ಬಗ್ಗೆ ಕೇಂದ್ರ ಸರಕಾರದೊಂದಿಗೆ ಮಾತುಕತೆ ನಡೆಸಲಾಗಿದೆ. ಕೇಂದ್ರದಿಂದ ಪರಿಹಾರ ಸಿಗಲು ಸ್ವಲ್ಪ ಸಮಯಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 

ಜಿಲ್ಲೆಯಲ್ಲಿ ನೆರೆ ಸಂತ್ರಸ್ತರನ್ನು ಭೇಟಿ ಮಾಡಿ ಮಾತನಾಡಿದ ಅವರು, ಒಂದು ಮನೆ ನಿರ್ಮಾಣಕ್ಕೆ ಒಟ್ಟಾರೆ ಐದು ಲಕ್ಷ ರೂ. ನೀಡಲು ಸರಕಾರ ನಿರ್ಧರಿಸಿದೆ. ಅಡಿಪಾಯ ಹಾಕಲು ಮುಂದಾಗುವ ಕುಟುಂಬಗಳಿಗೆ ವಾರದೊಳಗೆ ಒಂದು ಲಕ್ಷ ರೂ. ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅದೇ ರೀತಿ ಮನೆಗಳ ದುರಸ್ತಿಗೆ ಒಂದು ಲಕ್ಷ ರೂ. ನೆರವು ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.

ಸರಕಾರ ನೆರೆ ಸಂತ್ರಸ್ತರಿಗೆ ಬೆಂಬಲವಾಗಿ ನಿಲ್ಲುತ್ತದೆ. ಎಲ್ಲ ಕಾರ್ಯಕ್ರಮಗಳನ್ನು ಬದಿಗೊತ್ತಿ ನಮ್ಮ ಬೆಂಬಲ ನೀಡಲಾಗುವುದು. ಪ್ರವಾಹ ಸಂತ್ರಸ್ತರು ಯಾವುದೇ ಕಾರಣಕ್ಕೂ ಹೆದರುವ ಅವಶ್ಯಕತೆಯಿಲ್ಲ. ಎಲ್ಲಾ ಗ್ರಾಮಗಳಲ್ಲಿಯೂ ಹದಗೆಟ್ಟಿರುವ ರಸ್ತೆಗಳನ್ನು ತಕ್ಷಣ ರಿಪೇರಿ ಮಾಡಿಸಿ ಕೊಡಲಾಗುವುದು. ಮುಚ್ಚಿರುವ ಶಾಲೆಗಳನ್ನು ಪುನರಾರಂಭಿಸಲಾಗುವುದು ಎಂದು ಅವರು ತಿಳಿಸಿದರು.

ರಾಮದುರ್ಗ ತಾಲೂಕಿನ ಚಿಕ್ಕ ಹಂಪಿಹೊಳಿ ಮತ್ತು ಹೀರೆ ಹಂಪಿಹೊಳಿ ಗ್ರಾಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಿ, ಇಲ್ಲಿನ ನೆರೆಪೀಡಿತ ಪ್ರದೇಶದಲ್ಲಿ ಪರಿಶೀಲನೆ ನಡೆಸಿದರು. ಹಾಗೆಯೇ ಸುರೇಬಾನ್ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.

ತಡೆಗೋಡೆ-ಅಂದಾಜುಪಟ್ಟಿ ತಯಾರಿಸಲು ಸೂಚನೆ: ಮಲಪ್ರಭಾ ನದಿ ದಂಡೆಯ ತಡೆಗೋಡೆ ಒಡೆದ ಪರಿಣಾಮ ಹಂಪಿಹೊಳಿ ಗ್ರಾಮಕ್ಕೆ ನೀರು ನುಗ್ಗುತ್ತಿರುವುದರಿಂದ ತಡೆಗೋಡೆ ನಿರ್ಮಾಣಕ್ಕೆ ಕೂಡಲೇ ಅಂದಾಜು ಪಟ್ಟಿಯನ್ನು ತಯಾರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆಂದು ತಿಳಿಸಿದರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳುವುದರ ಜತೆಗೆ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಂತ್ರಸ್ತರ ಮನೆಬಾಗಿಲಿಗೆ ಮುಖ್ಯಮಂತ್ರಿಗಳು ಬಂದಿದ್ದಾರೆ. ಮನೆಗಳ ಹಾನಿ ಮತ್ತು ಬೆಳೆಹಾನಿಗೆ ಸೂಕ್ತ ಪರಿಹಾರ ಒದಗಿಸುವುದರ ಜತೆಗೆ ಶಾಶ್ವತ ಪರಿಹಾರಕ್ಕೆ ಸರಕಾರ ಬದ್ಧವಾಗಿದೆ ಎಂದರು.

ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ರಾಮದುರ್ಗ ತಾಲೂಕಿನ 29 ಗ್ರಾಮಗಳು ಹಾಗೂ 9 ವಾರ್ಡ್‌ಗಳನ್ನು ಶಾಶ್ವತ ಸ್ಥಳಾಂತರ ಮಾಡಲು ಮನವಿ ಮಾಡಿದರು. ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಎಲ್ಲ ಸಂತ್ರಸ್ತರಿಗೆ ತಲಾ ಹತ್ತು ಸಾವಿರ ರೂ. ಪರಿಹಾರ ಹಣವನ್ನು ಆರ್‌ಟಿಜಿಎಸ್ ಮೂಲಕ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸವದತ್ತಿ ಶಾಸಕ ಆನಂದ ಮಾಮನಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News