ಸರಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ: ಹೈಕೋರ್ಟ್ ನಿರ್ದೇಶನ

Update: 2019-09-10 15:04 GMT

ಬೆಂಗಳೂರು, ಸೆ.10: ರಾಜ್ಯ ಸರಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಸೇರಿ ಶಿಕ್ಷಕರು ಹಾಗೂ ಸಿಬ್ಬಂದಿ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲು ಹೈಕೋರ್ಟ್ ಸರಕಾರ ಮತ್ತು ಶಿಕ್ಷಣ ಇಲಾಖೆಗೆ ನಿರ್ದೇಶಿಸಿದೆ.

ಈ ಕುರಿತು ಆ್ಯಂಟಿ ಕರಪ್ಷನ್ ಕೌನ್ಸಿಲ್ ಆಫ್ ಇಂಡಿಯಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಪಿ.ಎಂ.ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ವಿಚಾರಣೆ ವೇಳೆ ಸರಕಾರದ ಪರ ವಾದಿಸಿದ ವಕೀಲರು, ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿ, ಹಣಕಾಸು ಕೊರತೆ ಇರುವುದರಿಂದ ಸರಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ವೃದ್ಧಿಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಹಣಕಾಸು ಕೊರತೆ ಕಾರಣಕ್ಕಾಗಿಯೇ ಮೂಲ ಸೌಕರ್ಯ ಕಲ್ಪಿಸಲು ಸಾಧ್ಯವಾಗಿಲ್ಲ ಎಂಬುದನ್ನು ಒಪ್ಪಲಾಗದು. ಮಕ್ಕಳು, ಶಿಕ್ಷಕರು ಹಾಗೂ ಸಿಬ್ಬಂದಿ ಪ್ರಮಾಣಕ್ಕೆ ಅನುಗುಣವಾಗಿ ಮೂಲ ಸೌಕರ್ಯ ಕಲ್ಪಿಸಬೇಕೆಂದು ನಿರ್ದೇಶಿಸಿ ವಿಚಾರಣೆಯನ್ನು ಸೆ.26ಕ್ಕೆ ಮುಂದೂಡಿತು.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಆಯ್ದ ಒಂದು ಸಾವಿರ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ವಿಭಾಗ ಆರಂಭಿಸಲಾಗಿದೆ. ಸಾಧಕ-ಬಾಧಕ ಅರಿತು ಉಳಿದ ಶಾಲೆಗಳಿಗೂ ವಿಸ್ತರಿಸುವ ಕುರಿತು ತೀರ್ಮಾನಿಸಲಾಗುವುದು ಎಂದು ಪ್ರಮಾಣ ಪತ್ರಲ್ಲಿ ತಿಳಿಸಲಾಗಿದೆ. ಮಾಹಿತಿ ಸಿಂಧು ಯೋಜನೆಯಡಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 2000-2001ನೆ ಸಾಲಿನಿಂದ ಕಂಪ್ಯೂಟರ್ ಶಿಕ್ಷಣ ನೀಡಲಾಗುತ್ತಿದೆ. 2016-17ನೆ ಸಾಲಿನಿಂದ ಶಿಕ್ಷಕರ ತಾಂತ್ರಿಕ ಜ್ಞಾನದ ಗುಣಮಟ್ಟ ಹೆಚ್ಚಿಸಲು ಟಿಎಎಲ್‌ಪಿ ಯೋಜನೆಯಡಿ 2,500 ಪ್ರೌಢಶಾಲೆಗಳ 11 ಸಾವಿರ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. 2020-21ನೆ ಸಾಲಿನಲ್ಲಿ 4,681 ಸರಕಾರಿ ಶಾಲೆಗಳನ್ನು ಈ ಯೋಜನೆಯಡಿ ತರಲಾಗುವುದು ಎಂದು ತಿಳಿಸಲಾಗಿದೆ. ಅರ್ಜಿದಾರರ ಪರ ವಕೀಲೆ ಬಿ.ಸುಧಾ ವಾದ ಮಂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News