ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ: ಅಧಿಕಾರಿಗಳಿಗೆ ಶಾಸಕ ನರೇಂದ್ರ ಸೂಚನೆ

Update: 2019-09-11 16:03 GMT

ಹನೂರು, ಸೆ.11: ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಬಗೆಹರಿಸಲು ಅಧಿಕಾರಿಗಳು ನಿರ್ಲಕ್ಷ್ಯ ಮಾಡಬಾರದು ಎಂದು ಶಾಸಕ ನರೇಂದ್ರ ಸೂಚಿಸಿದರು.

ಹನೂರು ಪಟ್ಟಣದ ಲೋಕಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ರಾಮ ಪಂಚಾಯತ್ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಇತ್ತೀಚೆಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿ ಗ್ರಾಮಸ್ಥರಿಂದ ದೂರುಗಳ  ಮಹಾಪೂರವೇ ಬರುತ್ತಿದೆ. ಇದಕ್ಕೆ ನೀವು ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದ ಅವರು, 3 ದಿನಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸಬೇಕು. ಕುಡಿಯುವ ನೀರಿನ ವಿಷಯದಲ್ಲಿ ಯಾರೂ ನಿರ್ಲಕ್ಷ್ಯ ಮಾಡಬಾರದು ಎಂದು ಹೇಳಿದರು.

ಅಧಿಕಾರಿಗಳ ವಿರುದ್ಧ ಕ್ರಮ: ನೀರಿನ ಸಮಸ್ಯೆ ಇರುವ ಸ್ಥಳಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದಾಗ ಸಮರ್ಪಕ ಉತ್ತರ ಲಭಿಸಲಿಲ್ಲ. ಇದಕ್ಕೆ ಆಕ್ರೋಶಗೊಂಡ ಶಾಸಕರು, ಮುಂದಿನ ದಿನಗಳಲ್ಲಿ ಇಂತಹ ಸನ್ನಿವೇಶಗಳು ಮರುಕಳಿಸಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಶುಚಿತ್ವಕ್ಕೆ ಒತ್ತು ನೀಡಿ: ಪಂಚಾಯತ್ ವ್ಯಾಪ್ತಿಯಲ್ಲಿರುವ ಓವರ್‍ಹೆಡ್ ಟ್ಯಾಂಕ್, ನೀರಿನ ತೂಂಬೆಗಳಲ್ಲಿ ಅಶುಚಿತ್ವ ತಾಂಡವಾಡುತ್ತಿರುವ ಬಗ್ಗೆಯೂ ಸಹ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಒಂದು ವಾರದಲ್ಲಿ ಈ ಬಗ್ಗೆ ಗಮನ ಹರಿಸಿ ಕ್ರಮಕೈಗೊಳ್ಳಿ ಎಂದು ತಿಳಿಸಿದರು.

ಬಳಿಕ, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ಭೊಯರ್ ಹರ್ಷಲ್ ಮಾತನಾಡಿ, ಪಂಚಾಯತ್ ಅಧಿಕಾರಿಗಳು ತಾವು ಕಾರ್ಯ ನಿರ್ವಹಿಸುವ ಸ್ಥಳದಲ್ಲಿ ದಿನ ನಿತ್ಯದ ದಿನವಹಿ ರಿಜಿಸ್ಟರ್ ಗಳನ್ನು ವ್ಯವಸ್ಥಿತ ರೀತಿಯಲ್ಲಿ ನಿರ್ವಹಣೆ ಮಾಡಬೇಕು. ಪಂಚಾಯತ್ ಆಸ್ತಿಗಳ ಬಗ್ಗೆ ಸಂಪೂರ್ಣ ವಿವರಗಳನ್ನು ಅದರಲ್ಲಿ ಲಗ್ಗತ್ತಿರಿಸಬೇಕು ಎಂದರು.

ಈ ಸಂದರ್ಭ ತಾಪಂ ಅಧ್ಯಕ್ಷ ರಾಜೇಂದ್ರ, ತಾಪಂ ಸದಸ್ಯ ಜವಾದ್‍ ಅಹಮದ್, ಕೊಳ್ಳೇಗಾಲ ಉಪವಿಭಾಗಾಧಿಕಾರಿ ನಿಖಿತಾ ಚಿನ್ನಸ್ವಾಮಿ, ಕೊಳ್ಳೇಗಾಲ ತಹಶೀಲ್ದಾರ್ ಕುನಾಲ್, ಹನೂರು ತಹಶೀಲ್ದಾರ್ ನಾಗರಾಜು, ಇಒ ಚಂದ್ರನ್, ಎಇಇ ಮಹದೇವ್‍ ಕುಮಾರ್ ಹಾಗೂ ವಿವಿಧ ಗ್ರಾಮ ಪಂಚಾಯತ್ ಗಳ ಅಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News