ಮಾಯಕೊಂಡ ತಾಲೂಕು ರಚನೆಗೆ ಕ್ರಮ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ

Update: 2019-09-12 15:51 GMT

ಬೆಂಗಳೂರು, ಸೆ. 12: ದಾವಣಗೆರೆ ಜಿಲ್ಲೆ ಮಾಯಕೊಂಡ ತಾಲೂಕು ರಚನೆಗೆ ಕಂದಾಯ ಇಲಾಖೆಯಿಂದ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಗುರುವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ದಾವಣಗೆರೆ ಜಿಲ್ಲೆ ಮಾಯಕೊಂಡ ಕ್ಷೇತ್ರದ ಅಭಿವೃದ್ಧಿ ಕುರಿತಂತೆ ತಮ್ಮನ್ನು ಭೇಟಿಯಾದ ನಿಯೋಗದೊಂದಿಗೆ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸಿದ ವೇಳೆ ಮಾಯಕೊಂಡ ತಾಲೂಕು ರಚನೆ ಕುರಿತು ಭರವಸೆ ನೀಡಿದರು.

ಹುಂಡೇಕಾರ್ ಸಮಿತಿ, ಗದ್ದಿಗೌಡರ ಸಮಿತಿ ಹಾಗೂ ವಾಸುದೇವರಾವ್ ಸಮಿತಿ ವರದಿಗಳಲ್ಲಿ ಮಾಯಕೊಂಡ ತಾಲೂಕು ರಚನೆಗೆ ಶಿಫಾರಸು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಕೊಂಡ ತಾಲೂಕು ರಚನೆಗೆ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಕಂದಾಯ ಇಲಾಖೆಗೆ ಸೂಚಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಮಾಯಕೊಂಡ ಕ್ಷೇತ್ರದ ಶಾಸಕ ಪ್ರೊ.ಲಿಂಗಣ್ಣ, ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ, ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳು ವಿರೂಪಾಕ್ಷಪ್ಪ ಸೇರಿದಂತೆ ದಾವಣಗೆರೆ ಜಿಲ್ಲೆಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News