ಡಿ.ಕೆ.ಶಿವಕುಮಾರ್ ಮೇಲೆ ದಬ್ಬಾಳಿಕೆ ಸಲ್ಲ: ಕೆಪಿಸಿಸಿ ಕಾಯಾಧ್ಯಕ್ಷ ಈಶ್ವರ್ ಖಂಡ್ರೆ

Update: 2019-09-12 16:31 GMT

ಬೀದರ್, ಸೆ. 12: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ರಾಜಕೀಯ ಪ್ರೇರಿತ ಪ್ರಕರಣ ದಾಖಲಿಸಿ, ದಬ್ಬಾಳಿಕೆ ಮಾಡುತ್ತಿದೆ. ಅಲ್ಲದೆ, ತನಿಖಾ ಸಂಸ್ಥೆಗಳನ್ನು ಕೇಂದ್ರ ಸರಕಾರ ಬಳಕೆ ಮಾಡಿಕೊಂಡು ಕಿರುಕುಳ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ದೂರಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರಿಗೆ ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿರುವುದು ಖಂಡನೀಯ. ಶಿವಕುಮಾರ್ ಅವರಿಗೆ ನ್ಯಾಯ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಡಿ.ಕೆ.ಶಿವಕುಮಾರ್ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಲಿದ್ದು, ಶಿವಕುಮಾರ್ ಅವರೊಂದಿಗೆ ಕಾಂಗ್ರೆಸ್ ಪಕ್ಷ ನಿಂತಿದೆ ಎಂದ ಅವರು, ಐಟಿ ಮತ್ತು ಈಡಿ ಸೇರಿ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ನೆರೆ ಸಂತ್ರಸ್ತರಿಗೆ ಕೇಂದ್ರ ಸರಕಾರ ಒಂದು ತಿಂಗಳು ಕಳೆದರೂ ಈವರೆಗೂ ಬಿಡಿಗಾಸನ್ನು ನೀಡಿಲ್ಲ ಎಂದು ಟೀಕಿಸಿದ ಅವರು, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳಿ ಪರಿಹಾರ ಕೇಳಲು ಸಿಎಂ ಯಡಿಯೂರಪ್ಪ ಹಾಗೂ ರಾಜ್ಯ ಪ್ರತಿನಿಧಿಸುವ ಸಂಸದರಿಗೆ ಎದೆಗಾರಿಕೆ ಇಲ್ಲವೇ? ಎಂದು ಪ್ರಶ್ನಿಸಿದರು.

ಪ್ರಧಾನಿ ಮೋದಿ ಅವರಿಗೆ ಕರ್ನಾಟಕ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಸಂತ್ರಸ್ತರ ಬಗ್ಗೆ ಎಳ್ಳಷ್ಟು ಕಳಕಳಿ ಇಲ್ಲ. ಇಂತಹ ಸರಕಾರ ಬೇಕೇ ಎಂದು ಪ್ರಶ್ನಿಸಿದ ಅವರು, ರಾಜ್ಯದಿಂದ ಬಿಜೆಪಿಯ 25 ಮಂದಿ ಸಂಸದರನ್ನು ಗೆಲ್ಲಿಸಿದ್ದು ಅವರೆಲ್ಲರೂ ಎಲ್ಲಿದ್ದಾರೆಂದು ವಾಗ್ದಾಳಿ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News