ಜಗಳೂರಿಗೆ ಭದ್ರಾ ಮೇಲ್ದಂಡೆ ಯೋಜನೆ ವಿಸ್ತರಣೆ: ಬಿ.ಎಸ್.ಯಡಿಯೂರಪ್ಪ

Update: 2019-09-13 12:52 GMT

ಬೆಂಗಳೂರು, ಸೆ.13: ಭದ್ರಾ ಮೇಲ್ದಂಡೆ ಯೋಜನೆಯಡಿ ಕೈಗೊಂಡಿರುವ ಕುಡಿಯುವ ನೀರು ಯೋಜನೆಯನ್ನು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿಗೂ ವಿಸ್ತರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ, ಜಗಳೂರಿಗೆ ಪೈಪ್‌ಲೈನ್‌ನಲ್ಲಿ ಕುಡಿಯುವ ನೀರು ಪೂರೈಕೆ ಮಾಡುವ ಸಂಬಂಧ ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಸಂಸದ ಸಿದ್ಧೇಶ್ವರ್ ಮಾತನಾಡಿ, ಭದ್ರಾ ಮೇಲ್ದಂಡೆಯಿಂದ ಕೋಲಾರ, ಚಿತ್ರದುರ್ಗಾ ಮತ್ತು ತುಮಕೂರಿನಲ್ಲಿ 2.4ಟಿಎಂಸಿ ನೀರು ಬಳಕೆ ಮಾಡಿ ಕುಡಿಯುವ ನೀರಿನ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಇದನ್ನು ಜಗಳೂರಿಗೂ ವಿಸ್ತರಣೆ ಮಾಡಬೇಕೆಂದು ಬಿ.ಎಸ್.ಯಡಿಯೂರಪ್ಪಗೆ ಮನವಿ ಮಾಡಿದೆವು ಎಂದರು. ತುಂಗಾಭದ್ರ ನದಿಯಿಂದ ಜಗಳೂರಿನ 53ಕೆರೆಗಳಿಗೆ ನೀರು ಪೂರೈಕೆ ಮಾಡುವ 663 ಕೋಟಿ ರೂ.ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ. ಇದೇ ರೀತಿ ಹರಿಹರ ಮತ್ತು ಜಗಳೂರಿಗೆ ಕುಡಿಯುವ ನೀರು ಒದಗಿಸಲು ಒಪ್ಪಿಗೆ ಕೊಡಲಾಗಿದೆ. ಈ ಎರಡೂ ತಾಲೂಕುಗಳಲ್ಲಿ ಜಾನುವಾರುಗಳಿಗೆ ಮೇವು ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News