×
Ad

ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ: ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಕಾರ

Update: 2019-09-13 22:17 IST

ಬೆಂಗಳೂರು, ಸೆ.13: 2016ರಲ್ಲಿ ನಡೆದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಮೊದಲ ಆರೋಪಿ ಕುಮಾರಸ್ವಾಮಿಗೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿ, ಅರ್ಜಿಯನ್ನು ವಜಾಗೊಳಿಸಿದೆ. 

ಈ ಕುರಿತು ಜಾಮೀನು ಕೋರಿ ತುಮಕೂರು ಮೂಲದ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ನಾನೂ ಈಗ ಸದ್ಯ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದೇನೆ. ಪೊಲೀಸರು ತನಿಖೆಯನ್ನು ವಿಳಂಬ ಮಾಡುತ್ತಿದ್ದಾರೆ. ಹೀಗಾಗಿ, ಜಾಮೀನು ನೀಡಬೇಕೆಂದು ಅರ್ಜಿದಾರ ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು.

ನ್ಯಾಯಪೀಠವು ಆರೋಪಿಗೆ ಜಾಮೀನು ನೀಡಿದರೆ ಶಿಕ್ಷಣದ ವ್ಯವಸ್ಥೆಗೆ ಮತ್ತೆ ಧಕ್ಕೆ ತರುವ ಸಾಧ್ಯತೆ ಇದೆ. ಅಲ್ಲದೆ, ಆರೋಪಿಯನ್ನು ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ(ಕೋಕಾ) ಅಡಿ ತನಿಖೆ ನಡೆಸಲಾಗುತ್ತಿದೆ. ಹೀಗಾಗಿ, ಜಾಮೀನು ನೀಡಲು ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News