ಪ್ರವಾಹ ಪರಿಸ್ಥಿತಿ ನಿರ್ವಹಣೆಯಲ್ಲಿ ಬಿಜೆಪಿ ಸರಕಾರ ವಿಫಲ: ಸತೀಶ್ ಜಾರಕಿಹೊಳಿ

Update: 2019-09-14 14:37 GMT

ಬೆಳಗಾವಿ, ಸೆ.14: ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಸರಕಾರವಿದ್ದರೆ ಅಭಿವೃದ್ಧಿ ಆಗುತ್ತದೆ ಎಂದು ಜನತೆ ಇಟ್ಟುಕೊಂಡಿದ್ದ ನಿರೀಕ್ಷೆ ಹುಸಿಯಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ನೆರವು ಕೊಡಿಸಲು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವಲ್ಲಿ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ದೂರಿದರು.

ನೆರೆ ಸಂತ್ರಸ್ತರಿಗೆ ತಾತ್ಕಾಲಿಕವಾಗಿ 10 ಸಾವಿರ ರೂ.ಗಳನ್ನು ಕೊಟ್ಟು ಸರಕಾರ ಸುಮ್ಮನಾಗಿದೆ. ಮನೆಗಳನ್ನು ಕಳೆದುಕೊಂಡಿರುವವರಿಗೆ ಮನೆ ಬಾಡಿಗೆ 5 ಸಾವಿರ ರೂ. ಅಥವಾ ತಾತ್ಕಾಲಿಕ ಶೆಡ್‌ಗಳನ್ನು ಈವರೆಗೆ ನಿರ್ಮಿಸಿಲ್ಲ. ಬೆಳೆ ಹಾನಿ ಬಗ್ಗೆ ಸಮೀಕ್ಷೆಯಾಗಿಲ್ಲ ಎಂದು ಅವರು ಆರೋಪಿಸಿದರು.

ನೆರೆ ಸಂತ್ರಸ್ತರ ಸಮಸ್ಯೆಗಳ ಬಗ್ಗೆ ರಾಜ್ಯ ಸರಕಾರದ ಗಮನ ಸೆಳೆಯಲು ಬೆಳಗಾವಿಯಲ್ಲಿ ನಿರಾಶ್ರಿತರೊಂದಿಗೆ ಸೇರಿ ಬೃಹತ್ ಪ್ರತಿಭಟನೆ ಮಾಡಲಾಗುವುದು. ಈ ಸಂಬಂಧ ಶೀಘ್ರವೇ ದಿನಾಂಕವನ್ನು ನಿಗದಿ ಮಾಡಲಾಗುವುದು ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವವರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಈ ವಿಚಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಗಮನಕ್ಕೆ ತರಲಾಗಿದೆ. ನಮ್ಮ ಕಾರ್ಯಕರ್ತರ ರಕ್ಷಣೆಗೆ ನಾವು ಬದ್ಧ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News