ಕರ್ನಾಟಕದ ಅನರ್ಹ ಶಾಸಕರ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಶಾಂತನಗೌಡರ್

Update: 2019-09-17 15:04 GMT

ಹೊಸದಿಲ್ಲಿ, ಸೆ. 17: ತಮ್ಮನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಸ್ಪೀಕರ್ ಕ್ರಮ ಪ್ರಶ್ನಿಸಿ ರಾಜ್ಯದ 17 ಅನರ್ಹ ಶಾಸಕರು ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ಹಿಂದೆ ಸರಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಸೆಪ್ಟಂಬರ್ 23ಕ್ಕೆ ಮುಂದೂಡಲಾಗಿದೆ. ಕರ್ನಾಟಕದ 17 ಅನರ್ಹ ಶಾಸಕರ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ ನಡೆಯಬೇಕಿತ್ತು. ಆದರೆ, ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ಈ ವಿಚಾರಣೆಯಿಂದ ಹಿಂದೆ ಸರಿದರು.

ನ್ಯಾಯಮೂರ್ತಿ ಅಜಯ್ ರಸ್ತೋಗಿ ಅವರನ್ನು ಒಳಗೊಂಡ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಶಾಂತನಗೌಡರ್ ಕೂಡ ಒಬ್ಬರು. ತಾನು ಕರ್ನಾಟಕ ಮೂಲದವನಾಗಿದ್ದುದರಿಂದ ಈ ವಿಚಾರಣೆ ನಡೆಸಲು ಆತ್ಮ ಸಾಕ್ಷಿ ಒಪ್ಪುವುದಿಲ್ಲ. ಆದುದರಿಂದ ತಾನು ಈ ವಿಚಾರಣೆಯಿಂದ ಹಿಂದೆ ಸರಿಯುವುದಾಗಿ ಅವರು ಪ್ರಕಟಿಸಿದರು. ಎಚ್.ಡಿ. ಕುಮಾರ ಸ್ವಾಮಿ ಅವರ ಮೈತ್ರಿ ಸರಕಾರ ವಿಶ್ವಾಸಮತದಲ್ಲಿ ಸೋತ ಬಳಿಕ ಜುಲೈ ಅಂತ್ಯದಲ್ಲಿ ಕರ್ನಾಟಕದ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ 17 ಶಾಸಕರನ್ನು ಅನರ್ಹಗೊಳಿಸಿದ್ದರು. ಈ 17 ಶಾಸಕರು ಬೇರೆ ಬೇರೆ ಸಂದರ್ಭಗಳಲ್ಲಿ ಕರ್ನಾಟಕ ವಿಧಾನಸಭೆಗೆ ರಾಜೀನಾಮೆ ನೀಡಿದ್ದರು. ಇದರಿಂದ ಕರ್ನಾಟಕ ಸರಕಾರ ಬಿಕ್ಕಟ್ಟಿಗೆ ಸಿಲುಕಿತ್ತು. ಅಂತಿಮವಾಗಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News