ಸಾಲ ವಸೂಲಾತಿ ತಕ್ಷಣ ನಿಲ್ಲಿಸಲು ಬ್ಯಾಂಕುಗಳಿಗೆ ಜಿಲ್ಲಾಧಿಕಾರಿ ಸೂಚನೆ

Update: 2019-09-17 16:38 GMT

ಬೆಳಗಾವಿ, ಸೆ.17: ರೈತರ ಸಾಲ ವಸೂಲಾತಿ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು. ಒಂದು ವೇಳೆ ಪ್ರಕರಣ ನ್ಯಾಯಾಲಯ ಮೆಟ್ಟಿಲೇರಿದ್ದರೆ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಅವುಗಳನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಬೇಕು ಎಂದು ಬ್ಯಾಂಕುಗಳ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸೂಚನೆ ನೀಡಿದ್ದಾರೆ.

ಸಂತ್ರಸ್ತರು ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಬ್ಯಾಂಕುಗಳ ಅಧಿಕಾರಿಗಳು, ರೈತ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಕೃತ, ಸಹಕಾರಿ ಬ್ಯಾಂಕುಗಳು ಜನರ ಪರಿಸ್ಥಿತಿ ಅರಿತುಕೊಂಡು ಕೆಲಸ ಮಾಡಬೇಕು. ಸಾಲಮನ್ನಾ ಅರ್ಹತೆ ಹೊಂದಿರುವ ರೈತರ ವಿರುದ್ಧದ ಪ್ರಕರಣಗಳನ್ನು ಸ್ಥಗಿತಗೊಳಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಸಾಲ ವಸೂಲಾತಿಗೆ ಸಂಬಂಧಿಸಿದಂತೆ ನೋಟಿಸ್ ಅಥವಾ ವಾರಂಟ್‌ಗಳು ಬಂದಾಗ ಒಮ್ಮೆಲೆ ಭಯಗೊಳ್ಳುವ ಅಗತ್ಯವಿಲ್ಲ. ನೋಟಿಸ್ ಅಥವಾ ವಾರಂಟ್ ಬಂದಾಗ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೆ ಅದಕ್ಕೆ ಕಾನೂನು ಪ್ರಕಾರ ರಕ್ಷಣೆಯನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಸಾಲ ನೀಡುವಾಗ ಕೆಲವು ಖಾಸಗಿ ಬ್ಯಾಂಕುಗಳು ಖಾಲಿ ಚೆಕ್ ಪಡೆದುಕೊಳ್ಳಲು ಅವಕಾಶಗಳಿಲ್ಲ. ಮುಂದಿನ ದಿನಾಂಕಗಳನ್ನು ನಮೂದಿಸಿ ಚೆಕ್ ಪಡೆಯುವ ಪದ್ಧತಿ ಇದೆ. ಒಂದು ವೇಳೆ ಯಾರಾದರೂ ನಿಯಮ ಉಲ್ಲಂಘಿಸಿ ಖಾಲಿ ಚೆಕ್ ಪಡೆದುಕೊಂಡರೆ ಕ್ರಮ ತೆಗೆದುಕೊಳ್ಳಲಾಗುವುದು. ಖಾಸಗಿ ಬ್ಯಾಂಕುಗಳು ತಮ್ಮ ನ್ಯಾಯಾಲಯ ಪರಿಮಿತಿಯನ್ನು ಸಾಧ್ಯವಾದರೆ ರಾಜ್ಯದಲ್ಲಿ ನಿಗದಿಗೊಳಿಸುವಂತೆ ಅವರು ಸಲಹೆ ನೀಡಿದರು.

ಸಂಧ್ಯಾ ಸುರಕ್ಷಾ, ವಿಧವಾ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುವ ಯಾವುದೇ ರೀತಿಯ ಪಿಂಚಣಿಯನ್ನು ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಸಾಲ ವಿತರಣೆಗೆ ಸಂಬಂಧಿಸಿದ ದಾಖಲಾತಿಗಳನ್ನು(ಲೋನ್ ಡಾಕ್ಯುಮೆಂಟ್) ಕಡ್ಡಾಯವಾಗಿ ಕನ್ನಡದಲ್ಲಿ ನೀಡಲು ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ನೀಡುವ ಪ್ರಕ್ರಿಯೆ ವಿಳಂಬ ಆಗುತ್ತಿರುವುದರಿಂದ ಜನರು ಅನಿವಾರ್ಯವಾಗಿ ಖಾಸಗಿ ಬ್ಯಾಂಕುಗಳ ಮೊರೆ ಹೋಗುತ್ತಾರೆ. ಆದುದರಿಂದ, ರಾಷ್ಟ್ರೀಕೃತ ಬ್ಯಾಂಕುಗಳು ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಸಾಲ ವಸೂಲಾತಿಗೆ ನಿಯೋಜಿಸುವ ಏಜೆನ್ಸಿಗಳ ಪೂರ್ವಾಪರ ಪರಿಶೀಲಿಸಿ ನೇಮಕ ಮಾಡಿಕೊಳ್ಳಬೇಕು. ಸಾಲವಸೂಲಾತಿ ನೆಪದಲ್ಲಿ ಗೂಂಡಾವರ್ತನೆ ಅಥವಾ ದೌರ್ಜನ್ಯ ಸಹಿಸುವುದಿಲ್ಲ. ಆ.14ರಂದು ರೈಲ್ವೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಬೆಳೆವಿಮೆ ಅವಧಿ ವಿಸ್ತರಣೆ ಹಾಗೂ ಸಾಲಮರು ಪಾವತಿ ಅವಧಿ ವಿಸ್ತರಣೆಗೆ ಬ್ಯಾಂಕ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿತ್ತು ಎಂದು ಅವರು ಹೇಳಿದರು.

ರೈತರು ಸಂಕಷ್ಟದಲ್ಲಿದ್ದು, ಸಾಲ ವಸೂಲಾತಿಗೆ ಒತ್ತಡ ಹಾಕಬಾರದು. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಾಲ ಹೊಂದಾಣಿಕೆ ಮಾಡಬಾರದು ಹಾಗೂ ಅವಧಿ ವಿಸ್ತರಣೆ ಮಾಡಿ ಕಾಲಾವಕಾಶ ನೀಡಬೇಕು ಎಂದು ಈಗಾಗಲೇ ರಾಜ್ಯಮಟ್ಟದ ಬ್ಯಾಂಕರ್ ಸಭೆಯಲ್ಲಿ ನಿರ್ದೇಶನ ನೀಡಲಾಗಿದೆ ಎಂದು ಬೊಮ್ಮನಹಳ್ಳಿ ತಿಳಿಸಿದರು.

ಜಿಲ್ಲೆಯಲ್ಲಿ ಎಂದೂ ಕಂಡರಿಯದ ಪ್ರವಾಹದಿಂದ ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ. ರೈತರು, ವ್ಯಾಪಾರಸ್ಥರು, ನೇಕಾರರು ಸಂಕಷ್ಟದಲ್ಲಿದ್ದು, ಅವರು ಬದುಕು ಕಟ್ಟಿಕೊಳ್ಳಲು ಸರಕಾರ ಮತ್ತು ಬ್ಯಾಂಕರುಗಳು ನೆರವಾಗಬೇಕಿದೆ. ಕೆಲವು ಪರಿಹಾರ ಕೇಂದ್ರಗಳಿಗೆ ತೆರಳಿ ಕೆಲವು ಮೈಕ್ರೋ ಫೈನಾನ್ಸ್‌ನವರು ಸಾಲ ವಸೂಲಾತಿಗೆ ಪ್ರಯತ್ನ ಮಾಡಿರುವುದು ಗಮನಕ್ಕೆ ಬಂದಿದೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಇನ್ನು ಮುಂದೆ ಯಾರಾದರೂ ಸಾಲ ವಸೂಲಾತಿಗೆ ಮುಂದಾದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ನೋಟಿಸ್ ಕೂಡ ನೀಡಬಾರದು. ಮೊದಲು ಮಾನವೀಯತೆ ಆಧಾರದ ಮೇಲೆ ಕೆಲಸ. ನಂತರ ಕಾನೂನಾತ್ಮಕ ಕ್ರಮಗಳ ಬಗ್ಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್‌ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್ಮ, ರಾಷ್ಟ್ರೀಕೃತ, ಸಹಕಾರಿ ಹಾಗೂ ಖಾಸಗಿ ಬ್ಯಾಂಕುಗಳ ಪ್ರತಿನಿಧಿಗಳು, ರೈತ ಮುಖಂಡರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News