ಪುತ್ತೂರು: ಮೊಸರು ಕುಡಿಕೆ ಉತ್ಸವದಲ್ಲಿ ಪ್ರಚೋದನಕಾರಿ ಭಾಷಣ; ಮೂವರ ವಿರುದ್ಧ ಪ್ರಕರಣ ದಾಖಲು

Update: 2019-09-17 17:08 GMT

ಪುತ್ತೂರು, ಸೆ.17: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆಗಸ್ಟ್ 31ರಂದು ನಡೆದ ಮೊಸರು ಕುಡಿಕೆ ಉತ್ಸವದ ಸಂದರ್ಭ ಕೋಮು ಪ್ರಚೋದನಕಾರಿ ಭಾಷಣ ಮಾಡಲಾಗಿದೆ ಎಂದು ಆರೋಪಿಸಿ ಮೂವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಜರಂಗ ದಳದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ರಘು ಸಕಲೇಶಪುರ, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷ ಕಡಮಜಲು ಸುಭಾಷ್ ರೈ ಮತ್ತು ವಿಶ್ವ ಹಿಂದೂ ಪರಿಷತ್ ಪುತ್ತೂರು ಅಧ್ಯಕ್ಷ ಜನಾರ್ದನ ಬೆಟ್ಟ ವಿರುದ್ಧಭಾರತೀಯ ದಂಡ ಸಂಹಿತೆ 153 (ಎ) ರಡಿ ಪ್ರಕರಣ ದಾಖಲಾಗಿದೆ. ಇವರ ವಿರುದ್ಧ ಪಿಎಫ್‌ಐ ಪುತ್ತೂರು ನಗರ ಸಮಿತಿಯ ಸದಸ್ಯ ಸಿರಾಜುದ್ದೀನ್ ಎಂಬವರು ದೂರು ನೀಡಿದ್ದಾರೆ.

ಆ.31ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆಯ ಸಭಾ ಕಾರ್ಯಕ್ರಮದಲ್ಲಿ ರಘು ಸಕಲೇಶಪುರ ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಘಾಸಿಯುಂಟು ಮಾಡುವ ಮತ್ತು ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ. ಇದಕ್ಕೆ ಉಳಿದಿಬ್ಬರು ಆರೋಪಿಗಳು ಕುಮ್ಮಕ್ಕು ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News