ಎಸ್ಸಿಪಿ-ಟಿಎಸ್ಪಿ ಅನುದಾನ ಅನ್ಯ ಉದ್ದೇಶಕ್ಕೆ ಬಳಕೆ ಇಲ್ಲ: ಡಿಸಿಎಂ ಗೋವಿಂದ ಕಾರಜೋಳ

Update: 2019-09-18 16:01 GMT

ಬೆಂಗಳೂರು, ಸೆ. 18: ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟಿರುವ ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನವನ್ನು ಕಡಿತಗೊಳಿಸುವುದಿಲ್ಲ. ಈ ಅನುದಾನವನ್ನು ಪರಿಶಿಷ್ಟರ ಕಲ್ಯಾಣಕ್ಕೆ ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳಿಗೆ ವಿನಿಯೋಗಿಸುವ ಆಲೋಚನೆ ಇಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟಣೆ ನೀಡಿದ್ದಾರೆ.

ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ಅಧಿನಿಯಮ 2013ರಡಿ ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನವನ್ನು ಪರಿಶಿಷ್ಟರ ಕಲ್ಯಾಣಕ್ಕಾಗಿ ಬಳಕೆ ಮಾಡಬೇಕು. ಬೇರೆ ಯಾವುದೇ ಉದ್ದೇಶಕ್ಕೆ ಬಳಕೆ ಮಾಡುವಂತಿಲ್ಲ ಎಂದು ಅವರು ತಿಳಿಸಿದ್ದಾರೆ.

ಹಿಂದಿನ ಸರಕಾರವು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣಕ್ಕಾಗಿ ರೂಪಿಸಲಾಗಿದ್ದ ಎಲ್ಲ ಕಾರ್ಯಕ್ರಮಗಳನ್ನೂ ಮುಂದುವರೆಸಲಾಗುತ್ತಿದೆ. ಸಿಎಂ ಯಡಿಯೂರಪ್ಪಅಧ್ಯಕ್ಷತೆಯಲ್ಲಿ ಸೆ.16ರಂದು ನಡೆದ ಎಸ್ಸಿ-ಎಸ್ಟಿ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಎಸ್ಸಿಪಿ ಮತ್ತು ಟಿಎಸ್ಪಿ ಕಾರ್ಯಕ್ರಮಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನವನ್ನು ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆಗಳಲ್ಲಿ ಎಸ್ಸಿ-ಎಸ್ಟಿ ವರ್ಗದ ಕಲ್ಯಾಣಕ್ಕೆ ಸಂಬಂಧಪಡದಂತಹ ಎಲಿವೇಟೆಡ್ ಕಾರಿಡಾರ್, ಪೆರಿಫೆರಿಲ್ ರಸ್ತೆ ನಿರ್ಮಾಣ ಯೋಜನೆಗಳನ್ನು ರೂಪಿಸಲಾಗಿತ್ತು. ಈ ನಿಯಮದಡಿ ಇಂತಹ ಯೋಜನೆಗಳನ್ನು ರೂಪಿಸಲು ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಪರಿಶಿಷ್ಟರ ಏಳಿಗೆಗೆ ಅಲ್ಲದ ಇಂತಹ ಯೋಜನೆಗಳ ಅನುದಾನ ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿ ಎಸ್ಸಿ-ಎಸ್ಟಿ ಕಲ್ಯಾಣಕ್ಕೆ ವಿನಿಯೋಗಿಸಲಾಗುವುದು. ಈ ಅನುದಾನ ಪರಿಶಿಷ್ಟರಿಗೆ ನಿವೇಶನ, ವಸತಿ ನಿರ್ಮಾಣ, ಭೂ ಒಡೆತನ ಯೋಜನೆ, ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ, ಸ್ವಯಂ ಉದ್ಯೋಗದಂತಹ ಕಾರ್ಯಕ್ರಮಗಳಿಗೆ ವಿನಿಯೋಗಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಎಸ್ಸಿಪಿ ಮತ್ತು ಟಿಎಸ್ಪಿ ಕಾರ್ಯಕ್ರಮಗಳ ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲ್ಯಾಣಕ್ಕೆ ಅನ್ವಯವಾಗದಂತಹ ಕಾರ್ಯಕ್ರಮಗಳಿಗೆ ಉಪಯೋಗಿಸಲು ಅವಕಾಶ ಇರುವುದಿಲ್ಲ. ಇಂತಹ ಲೋಪಗಳನ್ನು ನಮ್ಮ ಸರಕಾರ ಸರಿಪಡಿಸಿ, ಈ ಅನುದಾನವನ್ನು ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಕೆ ಮಾಡುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಗೆ ಮೀಸಲಾಗಿರಿಸಿರುವ ಅನುದಾನವನ್ನು ಬೇರೆಡೆ ವರ್ಗಾಯಿಸುವ ಯಾವುದೇ ಪ್ರಸ್ತಾಪ ಸರಕಾರದ ಮುಂದೆ ಇಲ್ಲ. ಎಸ್ಸಿ-ಎಸ್ಟಿ ವರ್ಗದ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಅವರಿಗೋಸ್ಕರವೇ ವಿನಿಯೋಗಿಸಲಾಗುವುದು’

-ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ(ಟ್ವೀಟ್)

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News