ಅತಿವೃಷ್ಟಿ ಹಾನಿ: 100 ಕೋಟಿ ರೂ. ಮಂಜೂರಾತಿ- ಕಾಮಗಾರಿ ಅಂದಾಜು ಪಟ್ಟಿ ಸಲ್ಲಿಸಲು ಕೊಡಗು ಡಿಸಿ ಸೂಚನೆ

Update: 2019-09-18 18:43 GMT

ಮಡಿಕೇರಿ, ಸೆ.18: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾದ ರಸ್ತೆ, ಸೇತುವೆ ಸೇರಿದಂತೆ ವಿವಿಧ ಕಾಮಗಾರಿಗಳು ಹಾಗೂ ಮೂಲಭೂತ ಸೌಲಭ್ಯಕ್ಕಾಗಿ ಸರ್ಕಾರ 100 ಕೋಟಿ ರೂ. ಬಿಡುಗಡೆಗೆ ಮಂಜೂರಾತಿ ನೀಡಿದ್ದು, ಸಂಬಂಧಪಟ್ಟ ಅನುಷ್ಠಾನಾಧಿಕಾರಿಗಳು ಕಾಮಗಾರಿಯ ಅಂದಾಜು ಪಟ್ಟಿಯನ್ನು ತಕ್ಷಣ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ  ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರದ ನಿಯಮದಂತೆ ಕಾಮಗಾರಿ ಕೈಗೊಳ್ಳಬೇಕು. ರಸ್ತೆ, ಸೇತುವೆ, ತಡೆಗೋಡೆ ನಿರ್ಮಾಣ, ಅಂಗನವಾಡಿ, ಶಾಲೆಗಳು ಮತ್ತು ಪಶು ವೈದ್ಯ ಆಸ್ಪತ್ರೆ ಕಟ್ಟಡಗಳನ್ನು ಸರಿಪಡಿಸುವುದು ಹಾಗೂ ಅಯ್ಯಪ್ಪ ಬೆಟ್ಟವನ್ನು ಜಿಐಎಸ್ ವರದಿಯಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಇಂಜಿನಿಯರ್ ಗಳಿಗೆ ಸೂಚಿಸಿದರು. 

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗಿರುವ ಪ್ರದೇಶಗಳಲ್ಲಿ ಆದ್ಯತೆ ಮೇಲೆ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.  

ವಿವಿಧ ಕಾಮಗಾರಿಗೆ ಸಂಬಂಧಿಸಿದಂತೆ ಹೋಬಳಿವಾರು ಅಂದಾಜು ಪಟ್ಟಿ ಸಲ್ಲಿಸಬೇಕು. ಪ್ರಕೃತಿ ವಿಕೋಪ ಸಂಭವಿಸಿದ ವ್ಯಾಪ್ತಿಯಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ ಮಾಹಿತಿ ಪಡೆಯುವುದು, ಕಾಮಗಾರಿ ವಿವರ ಮತ್ತಿತರ ಸಂಬಂಧ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.   

ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಮಾತನಾಡಿ, ಆದ್ಯತೆ ಮೇಲೆ ಕಾಮಗಾರಿಗಳನ್ನು ಕೈಗೊಳ್ಳಬೇಕು. ನಿಯಮವನ್ನು ಪಾಲಿಸುವಂತೆ ಅವರು ಸೂಚಿಸಿದರು. 

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಲೋಕೋಪಯೋಗಿ ಇಲಾಖೆ ಎಇಇ ಸುರೇಶ್, ನಗರಾಭಿವೃದ್ಧಿ ಯೋಜನಾ ಕೋಶದ ಎಇಇ ಹೇಮಂತ್ ಕುಮಾರ್, ಪಿಎಂಜಿಎಸ್‍ವೈ ಎಂಜಿನಿಯರ್ ಗುಂಡಪ್ಪ, ಸಣ್ಣ ನೀರಾವರಿ ಇಲಾಖೆಯ ಎಂಜಿನಿಯರ್ ಕಾಂತರಾಜು, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ತಮ್ಮಯ್ಯ ಪ್ರವಾಸೋದ್ಯಮ ಅಧಿಕಾರಿ ರಾಘವೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಅರುಂಧತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಕಾಶಿನಾಥ್ ಇತರರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News