ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಬಿಜೆಪಿಗೆ ಧೈರ್ಯವಿಲ್ಲ: ಸತೀಶ್ ಜಾರಕಿಹೊಳಿ

Update: 2019-09-20 14:03 GMT

ಬೆಳಗಾವಿ, ಸೆ.20: ಉತ್ತರ ಕರ್ನಾಟಕ ಭಾಗದ ನೆರೆ ಸಂತ್ರಸ್ತರು ಪ್ರತಿಭಟನೆ ಮಾಡಬಹುದು ಎಂದು ಹೆದರಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಚಳಿಗಾಲದ ಅಧಿವೇಶನವನ್ನು ಬಿಜೆಪಿ ಸರಕಾರ ಬೆಂಗಳೂರಿಗೆ ಸ್ಥಳಾಂತರ ಮಾಡಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಗರದಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂದಾಯ ಸಚಿವ ಆರ್.ಅಶೋಕ್ ಈವರೆಗೆ ಬೆಳಗಾವಿಗೆ ಭೇಟಿ ನೀಡಿಲ್ಲ. ಅವರು ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದಾರೆ. ಮುಖ್ಯಮಂತ್ರಿ ಅವರಿಗೆ ಸೂಚನೆ ಕೊಟ್ಟು ಬೆಳಗಾವಿಗೆ ಕಳುಹಿಸಲಿ. ನೆರೆ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಸರಕಾರದ ಗಮನ ಸೆಳೆಯಲು ಕಾಂಗ್ರೆಸ್ ಪಕ್ಷ ಸೆ.24ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ನೆರೆ ಸಂತ್ರಸ್ತರಿಗೆ ನೆರವು ಕಲ್ಪಿಸಲು ಕೇಂದ್ರ ಸರಕಾರದಿಂದ ಅನುದಾನ ತರಲು ಬಿಜೆಪಿ ನಾಯಕರಿಗೆ ಸಾಧ್ಯವಾಗಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಂತ್ರಸ್ತರಿಗೆ ನೀಡಿರುವ ಹಲವಾರು ಚೆಕ್‌ಗಳು ಬೌನ್ಸ್ ಆಗಿವೆ, ನಿರಾಶ್ರಿತರಿಗೆ ತಾತ್ಕಾಲಿಕ ಶೆಡ್‌ಗಳು, ಮನೆಗಳ ನಿರ್ಮಾಣ ಕಾರ್ಯಕ್ಕೆ ಈವರೆಗೆ ಚಾಲನೆ ನೀಡಿಲ್ಲ ಎಂದು ಆರೋಪಿಸಿದ ಸತೀಶ್ ಜಾರಕಿಹೊಳಿ, ನೆರೆ ಸಂತ್ರಸ್ತರ ವಿಚಾರದಲ್ಲಿ ಸರಕಾರ ಸರ್ವ ಪಕ್ಷಗಳ ಸಭೆ ಕರೆದು ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಎದುರು ನಿಂತು ಮಾತನಾಡಲು ಬಿಜೆಪಿಯವರಿಗೆ ಧೈರ್ಯವಿಲ್ಲ. ನಮ್ಮನ್ನು ಹೊಸದಿಲ್ಲಿಗೆ ಕರೆದುಕೊಂಡು ಹೋದರೆ ನಾವೇ ಅವರ ಬಳಿ ಮಾತನಾಡುತ್ತೇವೆ ಎಂದು ಅವರು ಹೇಳಿದರು.

ರಮೇಶ್‌ಗೆ ಡಿಸಿಎಂ ಹುದ್ದೆ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರವನ್ನು ಉರುಳಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಮೂಲಕ ರಮೇಶ್ ಜಾರಕಿಹೊಳಿ ರಾಜಕೀಯವಾಗಿ ನನಗಿಂತ ಎತ್ತರದ ಸ್ಥಾನಕ್ಕೆ ಹೋಗಿದ್ದಾರೆ. ಬಿಜೆಪಿ ಸರಕಾರದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಸ್ಥಾನ, ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವು ಸಿಗಬಹುದು. ಆನಂತರ ಗೋಕಾಕ್‌ನಲ್ಲಿ ಬೃಹತ್ ಸಭೆ ಮಾಡುತ್ತೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು. ರಮೇಶ್ ಜಾರಕಿಹೊಳಿ ಆರ್ಥಿಕವಾಗಿ ಖಾಲಿಯಾಗಿದ್ದು, ನಾನು ಸಾಲಗಾರ ಎಂದು ಇತ್ತೀಚೆಗೆ ಗೋಕಾಕ್‌ನಲ್ಲಿ ನಡೆಸಿದ ಸಮಾವೇಶದಲ್ಲಿ ಒಪ್ಪಿಕೊಂಡಿದ್ದಾರೆ. ಅವರ ಆಸ್ತಿಯನ್ನೆಲ್ಲ ಅವರ ಅಳಿಯ ಅಂಬಿರಾವ್ ಪಾಟೀಲ್ ತೆಗೆದುಕೊಂಡು ಹೋಗಿದ್ದಾನೆ. ಗೋಕಾಕ್ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾದರೆ ನಾನು ಹೇಳಿದವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಲಿದೆ. ಬಿಜೆಪಿ ಮುಖಂಡ ಅಶೋಕ್ ಪೂಜಾರಿ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಬಂದರೆ ಅವರಿಗೆ ಸ್ವಾಗತ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಜಾರಿ ನಿರ್ದೇಶನಾಲಯದಿಂದ ಡಿ.ಕೆ.ಶಿವಕುಮಾರ್ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ವಿಚಾರಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ. ಆದರೆ, ಯಾವುದೇ ಕಾರಣಕ್ಕೂ ನಿರಪರಾಧಿಗಳಿಗೆ ಶಿಕ್ಷೆಯಾಗಬಾರದು. ಲಕ್ಷ್ಮಿ ಹೆಬ್ಬಾಳ್ಕರ್ ವಿಚಾರಣೆ ಎದುರಿಸಲು ಸಮರ್ಥರಿದ್ದಾರೆ. ಈ.ಡಿ.ಗೆ ದೇಶದಲ್ಲಿರುವ 130 ಕೋಟಿ ಜನರನ್ನು ಕಟ್ಟಿ ಹಾಕಲು ಸಾಧ್ಯವಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News