ಅಖಂಡ ಬಳ್ಳಾರಿ ಜಿಲ್ಲೆಗೆ ನನ್ನ ಸಹಮತವಿದೆ: ಸಚಿವ ಬಿ.ಶ್ರೀರಾಮುಲು

Update: 2019-09-20 14:31 GMT

ಬಳ್ಳಾರಿ, ಸೆ.20: ಬಳ್ಳಾರಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ, ಅದರ ಅಖಂಡತೆ ಪ್ರಮುಖವಾಗಿದೆ. ಬಳ್ಳಾರಿ ಜಿಲ್ಲೆಯ ಅಖಂಡತೆಗೆ ಅನೇಕ ಹೋರಾಟಗಾರರು, ಸ್ವಾಮೀಜಿಗಳ ಬೆಂಬಲವಿದೆ. ವೈಯಕ್ತಿಕವಾಗಿ ನಾನು ಇದಕ್ಕೆ ಸಹಮತ ವ್ಯಕ್ತಪಡಿಸುತ್ತೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ನೂತನ ವಿಜಯನಗರ ಜಿಲ್ಲೆ ರಚನೆ ಸಂಬಂಧ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮುಂದಿಡುವಂತೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನಿನ್ನೆ ಬರೆದ ಪತ್ರದ ಕುರಿತು ಶುಕ್ರವಾರ ನಗರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದರು.

ಈವರೆಗೆ ನಾವು ಒಗ್ಗಟ್ಟಾಗಿಯೇ ಕೆಲಸ, ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದೇವೆ. ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ಕೆಲವು ಆಗ್ರಹಿಸಿದರೆ, ಇನ್ನು ಕೆಲವರು ಹೂವಿನ ಹಡಗಲಿ ಅಥವಾ ಹಗರಿಬೊಮ್ಮನಹಳ್ಳಿಯನ್ನು ಜಿಲ್ಲಾ ಕೇಂದ್ರವನ್ನಾಗಿಸಬೇಕೆಂದು ಹೋರಾಟ ಮಾಡುತ್ತಿದ್ದಾರೆ ಎಂದು ಶ್ರೀರಾಮುಲು ಹೇಳಿದರು.

ಸಚಿವ ಸಂಪುಟ ಸಭೆಯಲ್ಲಿ ಹೊಸ ಜಿಲ್ಲೆ ರಚನೆ ಸಂಬಂಧ ಚರ್ಚಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಅದಕ್ಕಿಂತ ಮುಂಚೆ ಸೆ.21ರಂದು ನಾನು ಅವರನ್ನು ಭೇಟಿ ಮಾಡಿ ಈ ವಿಚಾರದ ಕುರಿತು ಚರ್ಚೆ ನಡೆಸುತ್ತೇನೆ. ಅಲ್ಲದೇ, ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಮಾತನಾಡುತ್ತೇನೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News