ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಪಾಕ್ಷಿಕ ಆಚರಣೆ

Update: 2019-09-20 16:56 GMT

ಬೆಂಗಳೂರು, ಸೆ.20: ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಗೆ ಒಂದು ವರ್ಷ ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಯೋಜನೆಯ ಕುರಿತು ಹೆಚ್ಚಿನ ಅರಿವು ಮೂಡಿಸಲು ಹಾಗೂ ಫಲಾನುಭವಿಗಳು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಪ್ರೇರೇಪಿಸಲು ರಾಜ್ಯದಲ್ಲಿ ಪಾಕ್ಷಿಕ ಆಚರಣೆ ನಡೆಸಲಾಗುತ್ತಿದೆ.

ಈ ಪಾಕ್ಷಿಕ ಆಚರಣೆ ಕಾರ್ಯಕ್ರಮದ ಅಂಗವಾಗಿ ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, ತಾಲೂಕು ಕೇಂದ್ರಗಳಲ್ಲಿ ವಾಕಥಾನ್, ಪ್ರಭಾತ್ ಪೇರಿ, ಜಾಥಾ ಕಾರ್ಯಕ್ರಮಗಳು, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ದಿನಾಚರಣೆ ಮುಂತಾದ ಪ್ರಚಾರ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.

ನಗರದಲ್ಲಿ ಸೆ.21ರಂದು ಬೆಳಗ್ಗೆ 7.30ಕ್ಕೆ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯ ವಾಕಥಾನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ವಾಕಥಾನ್ ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಚಾಲನೆ ನೀಡುತ್ತಾರೆ.

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯು ರಾಜ್ಯದ ಎಲ್ಲ ನಿವಾಸಿಗಳಿಗೆ ಆರೋಗ್ಯ ಸೇವೆ ಒದಗಿಸುವ ಮಹತ್ವದ ಯೋಜನೆಯಾಗಿದೆ. ಯೋಜನೆಯ ಅಡಿಯಲ್ಲಿ 1,650 ಚಿಕಿತ್ಸಾ ವಿಧಾನಗಳಿಗೆ ಚಿಕಿತ್ಸೆ ಲಭ್ಯವಿದೆ. ಬಿಪಿಎಲ್ ಪಡಿತರ ಕಾರ್ಡ್ ಹೊಂದಿರುವವರು ಹಾಗೂ ರಾಷ್ಟ್ರೀಯ ಸ್ವಾಸ್ಥ ಬಿಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ 5 ಲಕ್ಷ ರೂ.ಗಳವರೆಗೂ ಉಚಿತ ಚಿಕಿತ್ಸೆ ಲಭ್ಯವಿದೆ.

ಅನಾರೋಗ್ಯದಿಂದ ಬಳಲುತ್ತಿರುವವರು ಹತ್ತಿರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕು. ಅಲ್ಲಿ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡುತ್ತಾರೆ. ಒಂದೊಮ್ಮೆ ಚಿಕಿತ್ಸೆ ಲಭ್ಯವಿಲ್ಲದಿದ್ದರೆ ರೋಗಿಗೆ ರೆಫರಲ್ ನೀಡುತ್ತಾರೆ. ರೆಫರಲ್ ಪಡೆದುಕೊಂಡ ರೋಗಿಯು ತಾನು ಇಚ್ಛಿಸುವ ಯಾವುದೇ ನೋಂದಾಯಿತ ಸರಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ರಸ್ತೆ ಅಪಘಾತ ಸೇರಿದಂತೆ 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು.

ಆರೋಗ್ಯ ಕಾರ್ಡ್‌ನ್ನು ಸರಕಾರಿ ಆಸ್ಪತ್ರೆಗಳಲ್ಲಿ 10 ರೂ. ಶುಲ್ಕ ನೀಡಿ ಪಡೆದುಕೊಳ್ಳಬಹುದು. ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಸೇವಾ ಸಿಂಧು ಕೇಂದ್ರಗಳಲ್ಲಿ ಕಾಗದದ ಕಾರ್ಡಿಗೆ 10 ರೂ., ಪ್ಲಾಸ್ಟಿಕ್ ಕಾರ್ಡಿಗೆ 35 ರೂ. ಶುಲ್ಕ ನೀಡಿ ಪಡೆದುಕೊಳ್ಳಬಹುದು. ಆಧಾರ್ ಕಾರ್ಡ್ ಮತ್ತು ಪಡಿತರ ಕಾರ್ಡ್‌ಗಳನ್ನು ಹಾಜರು ಪಡಿಸಿ ಆರೋಗ್ಯ ಕಾರ್ಡ್ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರಕಾರಿ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆಗಳು, ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು, ಆರೋಗ್ಯ ಸಹಾಯವಾಣಿ 104, ಟೋಲ್ ಫ್ರೀ ಸಂಖ್ಯೆ: 1800 425 8330 ಮತ್ತು 1800 425 2646 ಅನ್ನು ಸಂಪರ್ಕಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News