ಎರಡು ದಿನಗಳಲ್ಲಿ ಕೇಂದ್ರದಿಂದ ನೆರೆ ಪರಿಹಾರ ಬಿಡುಗಡೆ: ಮುಖ್ಯಮಂತ್ರಿ ಯಡಿಯೂರಪ್ಪ

Update: 2019-09-22 12:44 GMT

ಹೊಸದಿಲ್ಲಿ/ಬೆಂಗಳೂರು, ಸೆ. 22: ನೆರೆ ಸಂತ್ರಸ್ತರಿಗೆ ಇನ್ನೂ ಎರಡು ಅಥವಾ ಮೂರು ದಿನಗಳಲ್ಲಿ ಕೇಂದ್ರ ಸರಕಾರ ಪರಿಹಾರವನ್ನು ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ.

ರವಿವಾರ ಹೊಸದಿಲ್ಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೆರೆ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ರಾಜ್ಯಕ್ಕೆ ತಾತ್ಕಾಲಿಕ ಪರಿಹಾರವಾಗಿ 2 ಸಾವಿರ ಕೋಟಿ ರೂ.ಬಿಡುಗಡೆ ಮಾಡಬೇಕೆಂದು ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಲಾಗಿದೆ. ನಮ್ಮ ಮನವಿಗೆ ಸ್ಪಂದಿಸಿರುವ ಅಮಿತ್ ಶಾ ಅವರು ಇನ್ನೂ ಎರಡು-ಮೂರು ದಿನಗಳಲ್ಲಿ ಕರ್ನಾಟಕ ರಾಜ್ಯಕ್ಕೆ ಹಣ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ. ನೆರೆ ಪರಿಹಾರಕ್ಕೆ ಹಣ ಬಿಡುಗಡೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಾ ಪ್ರವಾಸದಲ್ಲಿದ್ದು, ಅವರು ಸ್ವದೇಶಕ್ಕೆ ಮರಳಿದ ಕೂಡಲೇ ಅವರೊಂದಿಗೆ ಸಮಾಲೋಚನೆ ನಡೆಸಿ ನೆರೆ ಪರಿಹಾರದ ಹಣ ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳುವುದಾಗಿ ಅಮಿತ್ ಶಾ ಭರವಸೆ ನೀಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆಯೂ ಚರ್ಚೆ ಮಾಡಿದ್ದೇನೆ. ಅದು ಬಿಟ್ಟರೆ ಅನರ್ಹ ಶಾಸಕರ ಬಗ್ಗೆ ಅಮಿತ್ ಶಾ ಅವರೊಂದಿಗೆ ಯಾವುದೇ ಚರ್ಚೆ ಮಾಡಿಲ್ಲ ಎಂದು ಇದೇ ವೇಳೆ ಸ್ಪಷ್ಟನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News