ಸಿಎಂ ಬಿಎಸ್‌ವೈ-ಸಚಿವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಮುಖ್ಯ ಚುನಾವಣಾಧಿಕಾರಿಗೆ ದೂರು

Update: 2019-09-22 14:28 GMT

ಬೆಂಗಳೂರು, ಸೆ.22: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದೆ.

ರವಿವಾರ ನಗರದ ಶೇಷಾದ್ರಿ ರಸ್ತೆಯಲ್ಲಿರುವ ನಿರ್ವಾಚನ ನಿಲಯದಲ್ಲಿ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಸಂವಹನ ಹಾಗೂ ಮಾಧ್ಯಮ ವಿಭಾಗದ ಅಧ್ಯಕ್ಷ ವಿ.ಎಸ್.ಉಗ್ರಪ್ಪ, ವಿಧಾನಸೌಧದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಜೊತೆ ವಿಡಿಯೋ ಸಂವಾದ ನಡೆಸುವ ಮೂಲಕ ಮುಖ್ಯಮಂತ್ರಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದರು.

ಸರಕಾರಿ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆಗಳ ಕುರಿತು ಸಭೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ಸಲ್ಲಿಕೆ ಮಾಡಿದ್ದೇವೆ. ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ಭರವಸೆ ನೀಡಿದೆ ಎಂದು ಅವರು ಹೇಳಿದರು.

ಅನರ್ಹ ಶಾಸಕರ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾದ ಬಳಿಕ ಸರಕಾರಿ ಕಚೇರಿ ಹಾಗೂ ಅರಣ್ಯ ಭವನದ ಅತಿಥಿ ಗೃಹದಲ್ಲಿ ಅನರ್ಹ ಶಾಸಕರ ಜೊತೆ ಮುಖ್ಯಮಂತ್ರಿ ರಾಜಕೀಯ ಸಭೆ ನಡೆಸಿದ್ದಾರೆ. ಅಲ್ಲದೇ, ರಾಜ್ಯದ ಅಡ್ವೊಕೇಟ್ ಜನರಲ್‌ರನ್ನು ಕರೆದು ಅನರ್ಹ ವಿಚಾರದ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಉಗ್ರಪ್ಪ ಆರೋಪಿಸಿದರು.

ಬೆಳಗಾವಿಯಲ್ಲಿ ನೆರೆ ಸಂತ್ರಸ್ತರ ಜೊತೆ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ಸಭೆ ಹಾಗೂ ಜಮಖಂಡಿಯಿಂದ ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಪ್ರತಿಭಟನಾ ಸ್ಥಳಕ್ಕೆ ಮೆರವಣಿಗೆ ಮೂಲಕ ಆಗಮಿಸಲು ಅವಕಾಶ ಕೋರಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿ, ಅನುಮತಿ ಪಡೆದುಕೊಳ್ಳಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News