ಚಳಿಗಾಲದ ಅಧಿವೇಶನ ಮೂರು ದಿನಗಳಿಗೆ ಮೊಟಕು: ಸಚಿವ ಸಂಪುಟ ನಿರ್ಧಾರ

Update: 2019-09-23 17:27 GMT

ಬೆಂಗಳೂರು, ಸೆ.23: ಉಪ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು 10 ದಿನಗಳ ಬದಲಾಗಿ ಮೂರು ದಿನಗಳಿಗೆ ಮೊಟಕುಗೊಳಿಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಅ.16 ರಿಂದ 26ರವರೆಗೆ 10 ದಿನ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಇದೀಗ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಅ.10 ರಿಂದ 12ರವರೆಗೆ ಮೂರು ದಿನ ಮಾತ್ರ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದರು.

15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಘೋಷಣೆಯಾಗಿರುವುದರಿಂದ ನೀತಿ ಸಂಹಿತೆ ಜಾರಿಯಲ್ಲಿದೆ. ಈ 15 ತಾಲೂಕುಗಳಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯ, ಹೊಸ ಯೋಜನೆಗಳನ್ನು ಘೋಷಿಸುವಂತಿಲ್ಲ. ಆದರೆ, ನೆರೆ ಹಾಗೂ ಬರಕ್ಕೆ ಸಂಬಂಧಿಸಿದ ಪರಿಹಾರ ಕಾರ್ಯಕ್ರಮಗಳಿಗೆ ಯಾವುದೇ ರೀತಿಯಲ್ಲಿ ನೀತಿ ಸಂಹಿತೆ ಅಡ್ಡಿಯಾಗಲ್ಲ ಎಂದು ಅವರು ಹೇಳಿದರು.

ಅಧಿವೇಶನದಲ್ಲಿ ಪೂರಕ ಬಜೆಟ್ ಮಂಡನೆಗೆ ಮಾತ್ರ ಅನುಮೋದನೆ ಪಡೆದುಕೊಳ್ಳಲಾಗುವುದು. ಮಧ್ಯಂತರ ಬಜೆಟ್ ಮಂಡಿಸುವುದಿಲ್ಲ. ಹೊಸದಾಗಿ ಯಾವುದೇ ಘೋಷಣೆಗಳನ್ನು ಮಾಡುವುದಿಲ್ಲ ಎಂದು ಮಾಧುಸ್ವಾಮಿ ತಿಳಿಸಿದರು.

ಬಸವ ಕಲ್ಯಾಣದಲ್ಲಿ 50 ಕೋಟಿ ರೂ.ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಅದಕ್ಕಾಗಿ 20 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಮಾಧುಸ್ವಾಮಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News