ಸ್ಥಳೀಯರ ಸಹಭಾಗಿತ್ವದಲ್ಲಿ ಪರಿಸರ ಸಂರಕ್ಷಣೆಗೆ ಕ್ರಮ: ಸಚಿವ ಕೋಟ

Update: 2019-09-24 07:22 GMT

ಮಂಗಳೂರು, ಸೆ.24: ಪರಿಸರ, ಅರಣ್ಯ ಸಂರಕ್ಷಣೆಗೆ ಸ್ಥಳೀಯರ ಸಹಭಾಗಿತ್ವದಲ್ಲಿ ಕೇಂದ್ರ ಸರಕಾರದ ಸಹಕಾರದೊಂದಿಗೆ ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯ ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ನಗರದ ಪುರಭವನದಲ್ಲಿ ಸೋಮವಾರ ಅರಣ್ಯ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ 'ವೃಕ್ಷೋತ್ಸವ-219' ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

 ಮಾನವನ ಬದುಕಿಗೆ ಅಗತ್ಯವಾದ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆ. ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಜಾಗೃತಿ ಅಗತ್ಯವಿದೆ. ಅದೇರೀತಿ ಜನರ ಸಹಭಾಗಿತ್ವದ ಅಗತ್ಯವಿದೆ. ಈ ರಾಜ್ಯ ಸರಕಾರ ಪೂರ್ಣವಾಗಿ ಸಹಕಾರ ನೀಡಲಿದೆ ಎಂದು ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವೇದವ್ಯಾಸ ಕಾಮತ್ ಮಾತನಾಡಿ, ನಗರದ ಹಸುರೀಕರಣ, ಗಿಡ ನೆಡುವುದರ ಜೊತೆಗೆ ಅವುಗಳ ಪೋಷಣೆಯೂ ಮುಖ್ಯ. ಶೀಘ್ರವೇ ನಗರದಲ್ಲಿ ನಗರ ಅರಣ್ಯ ಯೋಜನೆಯನ್ನು ಹಮ್ಮಿಕೊಳ್ಳುವ ಚಿಂತನೆ ಇದೆ. ಈ ಯೋಜನೆಯ ಪ್ರಕಾರ ನಗರದ ಆಯ್ದ ಪ್ರದೇಶಗಳಲ್ಲಿ ಸ್ಥಳೀಯರ ಸಹಭಾಗಿತ್ವದಲ್ಲಿ ಅರಣ್ಯ ಬೆಳೆಸುವ ಚಿಂತನೆ ಇದೆ. ಅದೇ ರೀತಿ ನೀರು ಇಂಗಿಸುವ ಕೆಲಸ, ಹಿತ್ತಲಲ್ಲಿ ಗಿಡ ನೆಡುವುದನ್ನು ಕಡ್ಡಾಯ ಮಾಡಬೇಕಾಗಿದೆ ಎಂದರು.

ಸಮಾರಂಭದಲ್ಲಿ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News