ಕೆಜಿಎಫ್-2 ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ನೀಡಿದ ಹೈಕೋರ್ಟ್

Update: 2019-09-26 17:34 GMT

ಬೆಂಗಳೂರು, ಸೆ.26: ಪರಿಸರ ಹಾನಿ ಆರೋಪದ ಮೇರೆಗೆ ಕೆಜಿಎಫ್-2 ಸಿನಿಮಾ ಚಿತ್ರೀಕರಣಕ್ಕೆ ಅಧೀನ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ, ಚಿತ್ರೀಕರಣಕ್ಕೆ ಅನುಮತಿ ನೀಡಿದೆ.

ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ನಿರ್ಮಾಪಕ ವಿಜಯ್ ಕಿರಗಂದೂರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಕೆಜಿಎಫ್-2 ಸಿನಿಮಾ ಚಿತ್ರೀಕರಣವನ್ನು ಇಲ್ಲಿಯವರೆಗೆ ಪರಿಸರಕ್ಕೆ ಹಾನಿಯಾಗದಂತೆ ಚಿತ್ರೀಕರಿಸಲಾಗಿದೆ. ಹೀಗಾಗಿ, ಇನ್ನು ಮುಂದೆಯೂ ಹಾಗೆಯೇ ಚಿತ್ರೀಕರಣ ಮಾಡಲಾಗುತ್ತದೆ. ಹೀಗಾಗಿ, ಅಧೀನ ನ್ಯಾಯಾಲಯ ನೀಡಿರುವ ಆದೇಶಕ್ಕೆ ತಡೆ ನೀಡಬೇಕೆಂದು ಮನವಿ ಮಾಡಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ಅಧೀನ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿ, ಚಿತ್ರೀಕರಣಕ್ಕೆ ಅನುಮತಿ ನೀಡಿ ಆದೇಶಿಸಿತು. ಕೆಜಿಎಫ್‌ನ ಸಂರಕ್ಷಿತ ಸೈನೇಡ್ ದಿಬ್ಬದ ಪ್ರದೇಶಗಳಲ್ಲಿ ಚಿತ್ರೀಕರಣ ಮಾಡಿ ಪರಿಸರ ಹಾಳು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚಿತ್ರದ ಚಿತ್ರೀಕರಣಕ್ಕೆ ತಡೆಯಾಜ್ಞೆ ನೀಡಬೇಕೆಂದು ಅರ್ಜಿದಾರರು ಅಧೀ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News