×
Ad

ದತ್ತಪೀಠಕ್ಕೆ ಆಗಮಿಸುವ ಭಕ್ತರಿಗೆ ಮೂಲಭೂತ ಸೌಕರ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಬಗಾದಿ ಗೌತಮ್ ಸೂಚನೆ

Update: 2019-09-26 23:44 IST

ಚಿಕ್ಕಮಗಳೂರು, ಸೆ.26: ದತ್ತಮಾಲೆ ಅಭಿಯಾನದ ಹಿನ್ನೆಲೆಯಲ್ಲಿ ಶ್ರೀರಾಮ ಸೇನಾ ಕಾರ್ಯಕರ್ತರು ಅ.13ರಂದು ದತ್ತ ಪೀಠಕ್ಕೆ ಆಗಮಿಸುತ್ತಾರೆ. ಈ ಹಿನ್ನಲೆಯಲ್ಲಿ ಭಕ್ತರಿಗೆ, ಕಾರ್ಯಕರ್ತರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅ.13ರಂದು ಶ್ರೀರಾಮ ಸೇನಾ ಕಾರ್ಯಕರ್ತರು ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್‍ಗಿರಿ ಸ್ವಾಮಿ ದರ್ಗಾ ಸಂಸ್ಥೆಗೆ ಆಗಮಿಸುವ ಹಿನ್ನಲೆಯಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅ.13ರಂದು ಗುರು ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ನಡೆಯಲಿರುವ ಶ್ರೀರಾಮ ಸೇನಾ ಕಾರ್ಯಕರ್ತರು ನಡೆಸುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಲಿದ್ದು, ಅವರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಕಾರ್ಯಕ್ರಮದ ಸಮಯದಲ್ಲಿ ನಿರಂತರ ವಿದ್ಯುತ್ ಸರಬರಾಜು ಮಾಡುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು,

ವಾಹನಗಳ ಸುಗಮ ಸಂಚಾರದ ದೃಷ್ಠಿಯಿಂದ ನಗರದಿಂದ ಐ.ಡಿ.ಪೀಠಕ್ಕೆ ತೆರಳುವ ರಸ್ತೆಯ ದುರಸ್ಥಿ ಕಾರ್ಯ ಕೈಗೊಳ್ಳಬೇಕು ಹಾಗೂ ರಸ್ತೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಲೊಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಕ್ತಾರ ಅನುಕೂಲ, ಅಗತ್ಯಕ್ಕೆ ತಕ್ಕಂತೆ ಸುಮಾರು 10-15 ಮಿನಿ ಬಸ್ ಸೌಲಭ್ಯ ಒದಗಿಸಬೇಕೆಂದು ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ತಿಳಿಸಿದರಲ್ಲದೆ ತಾತ್ಕಾಲಿಕ ಆಸ್ಪತ್ರೆಯನ್ನು ತೆರೆದು ಚಿಕಿತ್ಸೆಗೆ ಅಗತ್ಯ ಔಷಧಿ ಸೇರಿದಂತೆ ಅಂಬ್ಯುಲೆನ್ಸ್ ವ್ಯವಸ್ಥೆ ಜೊತೆಗೆ ವೈದ್ಯಾಧಿಕಾರಿಗಳನ್ನು ನಿಯೋಜನೆ ಮಾಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ದತ್ತ ಪೀಠದಲ್ಲಿ ಕಟ್ಟಡಗಳಿಗೆ ಸುಣ್ಣ-ಬಣ್ಣವನ್ನು ಬಳಿಯುವಂತೆ ಹಾಗೂ ಸಿ.ಸಿ.ಟಿವಿ ಅಳವಡಿಕೆ ಮಾಡುವಂತೆ ನಿರ್ಮಿತಿ ಕೇಂದ್ರದವರಿಗೆ ಸೂಚಿಸಿದರು. ಬಿಎಸ್‍ಎನ್‍ಎಲ್ ತರಂಗಾಂತರಗಳು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಹಾಗೂ ಅಕ್ಟೋಬರ್ 13 ರಂದು ದತ್ತಾಪೀಠಕ್ಕೆ ಬರುವ ಪ್ರವಾಸಿಗರನ್ನು ನಿರ್ಬಂಧಿಸುವಂತೆ ಸಂಬಂಧಿಸಿದ ಇಲಾಖೆಯವರಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್‍ ಪಾಂಡೆ ಮಾತನಾಡಿ, ಜಿಲ್ಲೆಯಲ್ಲಿ ಭದ್ರತೆಯ ದೃಷ್ಟಿಯಿಂದ ಅಗತ್ಯವಿರುವ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗುವುದು, ಅಲ್ಲದೇ ಬರುವಂತಹ ಭಕ್ತಾಧಿಗಳಿಗೆ ಟ್ರಾಫಿಕ್ ತಪ್ಪಿಸಲು ಮಿನಿ ಬಸ್ ಮೂಲಕ ಬರುವಂತೆ ರಾಮಸೇನೆಯ ಕಾರ್ಯಕರ್ತರಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ, ಶ್ರೀ ರಾಮಸೇನೆಯ ಮುಖಂಡರುಗಳು ಸೇರಿದಂತೆ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News