ಕರ್ನಾಟಕದಲ್ಲಿ ಡಿ.5ರಂದು ಉಪಚುನಾವಣೆ: ಚುನಾವಣಾ ಆಯೋಗ ಘೋಷಣೆ

Update: 2019-09-27 17:03 GMT

ಬೆಂಗಳೂರು, ಸೆ.27: ಸ್ಪೀಕರ್ ನೀಡಿರುವ ರೂಲಿಂಗ್ ಹಿನ್ನೆಲೆಯಲ್ಲಿ 17 ಅನರ್ಹ ಶಾಸಕರ ಪೈಕಿ 15 ಮಂದಿ ಪ್ರತಿನಿಧಿಸುತ್ತಿದ್ದ ವಿಧಾನಸಭಾ ಕ್ಷೇತ್ರಗಳಿಗೆ ಡಿ.5ರಂದು ಉಪ ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗವು ಘೋಷಿಸಿದೆ.

ನವೆಂಬರ್ 11ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದೆ. ನವೆಂಬರ್ 18ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಲಿದೆ. ನ.21ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಲಿದೆ. ಡಿಸೆಂಬರ್ 5ರಂದು ಮತದಾನ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗವು ಘೋಷಿಸಿದೆ.

ಡಿಸೆಂಬರ್ 9 ಕ್ಕೆ ಮತ ಎಣಿಕೆ ಕಾರ್ಯವಿದ್ದು, ಡಿ.11 ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ. ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಂಡಿರುವ 17 ಮಂದಿ ಶಾಸಕರು 15ನೇ ವಿಧಾನಸಭೆಯ ಅವಧಿ ಪೂರ್ಣಗೊಳ್ಳುವವರೆಗೆ ಯಾವುದೇ ರೀತಿಯಲ್ಲಿ ಈ ಸದನದ ಸದಸ್ಯರಾಗಿ ಪ್ರವೇಶಿಸಲು ಸಾಧ್ಯವಾಗದಂತೆ ಅನರ್ಹಗೊಳಿಸಲಾಗುತ್ತಿದೆ ಎಂದು ಸ್ಪೀಕರ್ ಆಗಿದ್ದ ವೇಳೆ ಕೆ.ಆರ್.ರಮೇಶ್ ಕುಮಾರ್ ಆದೇಶ ಹೊರಡಿಸಿದ್ದರು.

ಗೊಂದಲದ ಹಿಂದಿನ ಅರ್ಥವೇನು?

ಸಾಂವಿಧಾನಿಕ ಸಂಸ್ಥೆಯೊಂದು ಈ ಮಟ್ಟದ ಗೊಂದಲದಲ್ಲಿ ಕಾರ್ಯನಿರ್ವಹಿಸುವುದರ ಹಿಂದಿನ ಅರ್ಥವೇನು? ಇಂಥ ಗೊಂದಲದ ಚುನಾವಣೆ ಎಂದೂ ಘೋಷಣೆಯಾಗಿರಲಿಲ್ಲ. ಒಂದು ಆಪರೇಷನ್ ಕಮಲ, ಜನಮನ್ನಣೆಯನ್ನು ಮಾರಿಕೊಳ್ಳುವ ಜನಪ್ರತಿನಿಧಿಗಳ ಪ್ರವೃತ್ತಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಷ್ಟೆಲ್ಲ ಅನರ್ಥಗಳನ್ನು ಸೃಷ್ಟಿಸುತ್ತದೆ ಎಂಬುದನ್ನು ಜನತೆ ಗಮನಿಸುತ್ತಿದ್ದಾರೆ.

-ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News