×
Ad

ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿದರೆ ಸಾಮೂಹಿಕ ರಾಜೀನಾಮೆ: ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಎಚ್ಚರಿಕೆ

Update: 2019-09-28 18:35 IST

ಬಳ್ಳಾರಿ, ಸೆ. 28: ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿದರೆ ಶಾಸಕ ಸ್ಥಾನಕ್ಕೆ ಸಾಮೂಹಿಕ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಬಿಜೆಪಿಯ ಶಾಸಕರು ಹಾಗೂ ಸಂಸದರಿಗೆ ಬಳ್ಳಾರಿ ಜಿಲ್ಲೆ ವಿಭಜನೆಗೆ ಒಪ್ಪಿಗೆ ಇಲ್ಲ. ಆನಂದ್ ಸಿಂಗ್ ಮನವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ತರಾತುರಿ ತೀರ್ಮಾನ ಕೈಗೊಳ್ಳಬಾರದು ಎಂದು ಕೋರಿದರು.

ಆನಂದ್ ಸಿಂಗ್ ಜಿಂದಾಲ್ ಕಂಪೆನಿ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ವೇಳೆ ಅವರು ಬಳ್ಳಾರಿ ಜಿಲ್ಲೆಯ ವಿಭಜನೆ ಬಗ್ಗೆ ಮಾತನಾಡಿರಲಿಲ್ಲ. ಆದರೆ, ಇದೀಗ ಬಳ್ಳಾರಿ ಜಿಲ್ಲೆ ವಿಭಜನೆ ಮಾಡಬೇಕೆಂದು ಕೋರಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇತ್ತೀಚೆಗೆ ಕೊಪ್ಪಳ ಪ್ರತ್ಯೇಕ ಜಿಲ್ಲೆ ಘೋಷಣೆ ಮಾಡಲಾಗಿದೆ. ಆದರೆ, ಅಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಸಮರ್ಪಕವಾಗಿ ನಡೆದಿಲ್ಲ. ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನ ಮಾಡಬೇಕು. ನಮ್ಮ ಜೊತೆ ಚರ್ಚಿಸದೇ ಯಾವ ನಿರ್ಧಾರ ಕೈಗೊಳ್ಳಬಾರದು ಎಂದು ಆಗ್ರಹಿಸಿದರು.

ಬಳ್ಳಾರಿ ಜಿಲ್ಲೆ ವಿಭಜನೆ ಮಾಡಲು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜನ ಸಾಮಾನ್ಯರ ವಿರೋಧವಿದೆ. ಜನತೆ ನಮ್ಮನ್ನು ಪ್ರಶ್ನಿಸಿದರೆ ಏನು ಉತ್ತರ ಹೇಳಬೇಕು ಎಂದ ಪ್ರಶ್ನಿಸಿದ ಅವರು, ಅಖಂಡ ಜಿಲ್ಲೆಯಾಗಿ ಇರಬೇಕು ಎಂದು ಆಗ್ರಹಿಸಿದರು.

ನವೆಂಬರ್‌ನಲ್ಲಿ ಹಂಪಿ ಉತ್ಸವ ಆಚರಣೆ ಮಾಡುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರೊಂದಿಗೆ ಚರ್ಚೆ ನಡೆಸುತ್ತೇವೆ. ಈ ಹಿಂದೆ ಹಂಪಿ ಉತ್ಸವ ಆಚರಣೆಗಾಗಿ ಪ್ರತಿಭಟನೆ ನಡೆಸಿದ್ದೆವು. ಈಗಲೂ ಹಂಪಿ ಉತ್ಸವ ಆಚರಣೆ ಮಾಡದಿದ್ದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

‘ಬಳ್ಳಾರಿ ಜಿಲ್ಲೆ ವಿಭಜನೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳನ್ನು ಕರೆದು ಸಮಾಲೋಚನೆ ನಡೆಸುವೆ. ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆ ವಿಭಜನೆ ಬೇಡಿಕೆ ಇದೆ. ಕೆಲವರು ಜಿಲ್ಲೆ ಇಬ್ಭಾಗ ಮಾಡುವುದು ಸಲ್ಲ ಎಂದು ಆಕ್ಷೇಪಿಸಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ. ಅ.3ಕ್ಕೆ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು’

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News