ಎಚ್‌ಡಿಕೆ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಕಾರ

Update: 2019-10-01 15:22 GMT

ಬೆಂಗಳೂರು, ಅ.1: ಹಲಗೆವಡೇರಹಳ್ಳಿ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡುವಂತೆ ಕೋರಿದ್ದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಈ ಕುರಿತು ಎಚ್‌ಡಿಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ರಜಾಕಾಲದ ಏಕಸದಸ್ಯ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಪಿ.ಜಿ.ಎಂ.ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಹಷ್ಮತ್ ಪಾಷಾ ಅವರು, ಎಚ್‌ಡಿಕೆ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ ಜಾರಿಗೊಳಿಸಿರುವ ಸಮನ್ಸ್ ರದ್ದುಪಡಿಸಬೇಕು ಹಾಗೂ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಮನವಿಯನ್ನು ತಿರಸ್ಕರಿಸಿ, ಎಚ್‌ಡಿಕೆಗೆ ವಿಚಾರಣೆ ವೇಳೆ ಖುದ್ದು ಹಾಜರಾತಿಗೆ ನಾಲ್ಕು ವಾರಗಳ ಕಾಲ ನಿವಾಯಿತಿ ನೀಡಿ, ವಿಚಾರಣೆಯನ್ನು ಮುಂದೂಡಿತು.

ಏನಿದು ಪ್ರಕರಣ: 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್‌ಡಿಕೆ ನಗರದ ಬನಶಂಕರಿ 5ನೆ ಹಂತದ ಹಲಗೆವಡೇರಹಳ್ಳಿ ವ್ಯಾಪ್ತಿಯಲ್ಲಿ 3 ಎಕರೆ 34 ಗುಂಟೆ ಪ್ರದೇಶವನ್ನು ಸರಕಾರದ ಸ್ವಾಧೀನದಿಂದ ಕೈಬಿಟ್ಟು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

7 ವರ್ಷ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, 2019ರ ಜನವರಿಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ಆಕ್ಷೇಪಿಸಿ ದೂರುದಾರ ಮಹದೇವಸ್ವಾಮಿ ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪುರಸ್ಕರಿಸಿತ್ತು. ಬಿ ರಿಪೋರ್ಟ್ ರದ್ದುಪಡಿಸಿ 2019 ಅ.4ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಎಚ್‌ಡಿಕೆ ಸೇರಿ ಪ್ರಕರಣದ ಎಲ್ಲ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News