ಸರಕಾರಿ ಆಂಗ್ಲ ಮಾಧ್ಯಮ ಶಿಕ್ಷಣ ಕುರಿತು ಸಿಎಂ ಜತೆ ಚರ್ಚೆ: ಸಚಿವ ಸುರೇಶ್ ಕುಮಾರ್
ಬಂಟ್ವಾಳ, ಅ. 1: ಸರಕಾರಿ ಶಾಲೆಗಳ ಆಂಗ್ಲ ಮಾಧ್ಯಮ ಶಿಕ್ಷಣದ ಕುರಿತು ಪರ ವಿರೋಧದ ಮಾತುಗಳು ಕೇಳಿ ಬರುತ್ತಿದ್ದು, ಈ ಸಮಸ್ಯೆ ಬಗೆಹರಿಸುವ ಸಲುವಾಗಿ ಶೀಘ್ರ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಎಂದು ರಾಜ್ಯ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಅವರು ಸೋಮವಾರ ರಾತ್ರಿ ಬಂಟ್ವಾಳ ಶಾಸಕರ ಕಚೇರಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಆಂಗ್ಲ ಮಾದ್ಯಮದ ಕುರಿತು ಹಿರಿಯ ಸಾಹಿತಿಗಳು ವಿರೋಧ ವ್ಯಕ್ತಪಡಿಸುತ್ತಿದ್ದು, ಪೋಷಕರು ಬೇಕು ಎನ್ನುತ್ತಿದ್ದಾರೆ. ಹೀಗಾಗಿ ಸರಕಾರ ಎಲ್ಲರ ಅಭಿಪ್ರಾಯ ಪಡೆಯಲಿದ್ದು, ಒಂದನೇ ತರಗತಿಯಿಂದ ಇಂಗ್ಲಿಷ್ ವಿಷಯ ಕಲಿಕೆಗೆ ಎಲ್ಲರ ಸಹಮತ ಇದೆ ಎಂದರು.
ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಲೈಂಗಿಕ ಕಿರುಕುಳ ತಡೆಗೆ ವಿಶೇಷ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಇದಕ್ಕಾಗಿ ಶೀಘ್ರ ಎಲ್ಲಾ ಜಿಲ್ಲೆಗಳ ಎಸ್ಪಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಗುತ್ತದೆ. ವಿದ್ಯಾರ್ಥಿಗಳಿಗೆ ವಿತರಿಸುವ ಸೈಕಲ್‍ಗಳ ಗುಣಮಟ್ಟ ಹೆಚ್ಚಳಕ್ಕೆ ಎಲ್ಲ ವಿಭಾಗ ವ್ಯಾಪ್ತಿಯ ಎಂಜಿನಿಯರಿಂಗ್ ಕಾಲೇಜುಗಳ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಸಹಕಾರ ಪಡೆದು ಗುಣಮಟ್ಟ ಪರಿಶೀಲನೆ ನಡೆಸಲಾಗುತ್ತದೆ. ಪರೀಕ್ಷೆಯ ಕುರಿತು ವಿದ್ಯಾರ್ಥಿಗಳಿಗೆ ತಿಳುವಳಿಗೆಗಾಗಿ 6 ಮತ್ತು 8ನೇ ತರಗತಿಯಲ್ಲಿ ವಿಶೇಷ ಪರೀಕ್ಷೆ ನಡೆಸುವ ಚಿಂತನೆ ಇದೆ. ಬ್ಯಾಗ್‍ಗಳು ವಿದ್ಯಾರ್ಥಿಗಳಿಗೆ ಹೊರೆಯಾಗುವ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸುವ ನಿಟ್ಟಿನಲ್ಲಿ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ಸಚಿವರು ವಿವರಿಸಿದರು.
ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಜೊತೆಗಿದ್ದರು.