ನಿಮ್ಮ ಮಂತ್ರಿಗಿರಿ ಜನರ ಭಿಕ್ಷೆ ಎನ್ನುವುದನ್ನು ಮರೆಯಬೇಡಿ: ಸದಾನಂದ ಗೌಡರ ವಿರುದ್ಧ ಹರಿಹಾಯ್ದ ಚಕ್ರವರ್ತಿ ಸೂಲಿಬೆಲೆ

Update: 2019-10-02 12:07 GMT

ಬೆಂಗಳೂರು, ಅ.2: ನೆರೆ ಪರಿಹಾರದ ಕುರಿತು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಮಾಡಿದ ಟ್ವೀಟ್ ವೊಂದಕ್ಕೆ ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರದಿಂದ ನೆರೆ ಪರಿಹಾರ ದೊರಕದ ಬಗ್ಗೆ ಸಂಸದರನ್ನು ತರಾಟೆಗೆ ತೆಗೆದಿದ್ದಾರೆ.

'ಪ್ರವಾಹ ಪೀಡಿತ ಪ್ರದೇಶಕ್ಕೆ ಬರಬೇಕಾದ ಪರಿಹಾರದ ಬಗ್ಗೆ ಇಲ್ಲ ಸಲ್ಲದ ಕಥೆ ಹೇಳಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿರುವವರ ಬಗ್ಗೆ ನಮಗೆ ಕನಿಕರವಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಆಗಬೇಕಾದ ತಕ್ಷಣ ಪರಿಹಾರ, ಮಧ್ಯಂತರ ಪರಿಹಾರ ಮತ್ತು ಧೀರ್ಘ ಕಾಲೀನ ಪರಿಹಾರದ ಬಗ್ಗೆ ಬೇಕಾದ ವರದಿಗಳನ್ನು ತಯಾರಿಸಿರುವ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ಮಾಹಿತಿ ನೀಡಿದ್ದಾರೆ' ಎಂದು ಡಿ.ವಿ.ಸದಾನಂದಗೌಡ ಟ್ವೀಟ್ ಮಾಡಿದ್ದರು. 

ಸಂಸದರ ಈ ಟ್ವೀಟ್ ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಚಕ್ರವರ್ತಿ ಸೂಲಿಬೆಲೆ, ಪ್ರವಾಹ ಕಳೆದು ಜನ ಬದುಕು ಕಟ್ಟಿಕೊಳ್ಳುವ ಕಾಲಕ್ಕೂ ಬರದ ಪರಿಹಾರ ಯಾವ ಪುರುಷಾರ್ಥಕ್ಕೆ? ಎಂದು ಪ್ರಶ್ನಿಸಿದ್ದಾರೆ.

‘ಓ ಇವರು ಈಗ ಬಂದಿದ್ದಾರೆ. ಸದಾನಂದ ಗೌಡರೇ, ನೊಂದಿರುವ ಉತ್ತರ ಕರ್ನಾಟಕದ ಜನರನ್ನು ದಾರಿ ತಪ್ಪಿಸುವವರು ಎನ್ನುವಷ್ಟು ಧಾರ್ಷ್ಟ್ಯ ತೋರಿರುವ ನಿಮ್ಮ ಬಗ್ಗೆ ನಾಡಿಗೇ ಕನಿಕರವಿದೆ. ನಿಮ್ಮ ಮಂತ್ರಿಗಿರಿ ಜನರ ಭಿಕ್ಷೆ ಎನ್ನುವುದನ್ನು ಮರೆಯಬೇಡಿ. ಪ್ರವಾಹ ಕಳೆದು ಜನ ಬದುಕು ಕಟ್ಟಿಕೊಳ್ಳುವ ಕಾಲಕ್ಕೂ ಬರದ ಪರಿಹಾರ ಯಾವ ಪುರುಷಾರ್ಥಕ್ಕೆ?’ ಎಂದು ಅವರು ಟ್ವೀಟ್‌ ಮೂಲಕ ಹರಿಹಾಯ್ದಿದ್ದಾರೆ.

ರಾಜ್ಯದಲ್ಲಿ ಉಂಟಾದ ಭೀಕರ ನೆರೆಗೆ ಕೇಂದ್ರ ಸರಕಾರದಿಂದ ಯಾವುದೇ ಪರಿಹಾರ ದೊರಕದ ಹಿನ್ನೆಲೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಪ್ರಧಾನಿ, ರಾಜಕೀಯ ಪಕ್ಷಗಳು ಹಾಗೂ ರಾಜ್ಯದ ಸಂಸದರ ನಡೆಗೆ ಟೀಕೆಗಳು ವ್ಯಕ್ತವಾಗುತ್ತಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News