ಸುಲಿಗೆ ಯತ್ನ ಆರೋಪ: ಐವರ ಬಂಧನ
Update: 2019-10-02 22:59 IST
ಬೆಂಗಳೂರು, ಅ.2: ರಸ್ತೆ ಪಾದಚಾರಿಗಳನ್ನು ಗುರಿಯಾಗಿಸಿಕೊಂಡು ಸುಲಿಗೆ ಮಾಡಲು ಯತ್ನಿಸಿದ ಆರೋಪದಡಿ ಐದು ಜನರನ್ನು ಸಿಸಿಬಿ ಪೊಲೀಸರು ಬಂಧಿಸಿ ಮಾರಕಾಸ್ತ್ರಗಳನ್ನು ಜಪ್ತಿ ಮಾಡಿದ್ದಾರೆ.
ಜಕ್ಕೂರು ಲೇಔಟ್ ಗಂಗಾಧರ್(30), ಶಿವಕುಮಾರ್(30), ಅರ್ಜುನ(30), ಮಂಜುನಾಥ(31) ಮತ್ತು ನರೇಶ್(29) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ ಅಮೃತಹಳ್ಳಿ ಪೊಲೀಸ್ ಠಾಣಾ ಸರಹದ್ದಿನ ಲುಂಬಿಣಿ ಗಾರ್ಡನ್ ಬಳಿಯ ಸರ್ವೀಸ್ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನಿಟ್ಟುಕೊಂಡು ಸಾರ್ವ ಜನಿಕರಿಂದ ನಗದು-ಚಿನ್ನ ದರೋಡೆಗೆ ಹೊಂಚು ಹಾಕುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತರಿಂದ ಕಾರು, ಮಾರಕಾಸ್ತ್ರ, ಖಾರದ ಪುಡಿ ಪೊಟ್ಟಣ ವಶಪಡಿಸಿಕೊಂಡು, ಆರೋಪಿಗಳ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.