ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ: ನಾಡಹಬ್ಬ ಆಚರಣೆಗೆ ಸಮನ್ವಯ ಕಾಯ್ದುಕೊಳ್ಳಿ- ಡಿಸಿ
ಮಂಗಳೂರು, ಅ.4: ಪ್ರಸಕ್ತ 2019ನೇ ಸಾಲಿನ ನ.1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಮಟ್ಟದ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಡಹಬ್ಬಕ್ಕೆ ಚ್ಯುತಿ ಬಾರದಂತೆ ವಿಜೃಂಭಣೆಯಿಂದ ಆಚರಿಸಬೇಕು. ಹಿಂದಿನ ವರ್ಷಗಳಲ್ಲಿ ಶಿಸ್ತುಬದ್ಧವಾಗಿ ಆಚರಿಸಿಕೊಂಡು ಬಂದಂತೆ ಈ ಸಾಲಿನಲ್ಲಿಯೂ ಭುವನೇಶ್ವರಿಯ ಭಾವಚಿತ್ರವನ್ನು ಮೆರವಣಿಗೆಯ ಮೂಲಕ ಬೆಳಗ್ಗೆ ಅಂಬೇಡ್ಕರ್ ವೃತ್ತದಿಂದ ಪ್ರಾರಂಭಿಸಿ ನೆಹರೂ ಮೈದಾನಕ್ಕೆ ತಲುಪಿಸಲು ಎಲ್ಲ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ನೆಹರೂ ಮೈದಾನದಲ್ಲಿ ಕನ್ನಡ ರಾಜೋತ್ಸವದ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವರು ನೆರವೇರಿಸಿ ಸಂದೇಶ ನೀಡಲಿದ್ದಾರೆ. ಅಧಿಕ ಸಂಖ್ಯೆಯಲ್ಲಿ ಶಾಲಾ ಮಕ್ಕಳು ಮೆರವಣಿಗೆಯಲ್ಲಿ ಭಾಗವಹಿಸಿ ನಾಡಹಬ್ಬವನ್ನು ಸಂಭ್ರಮದಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಹೇಳಿದರು.
ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಮಾತನಾಡಿ, ಮೆರವಣಿಗೆಯಲ್ಲಿ ಭಾಗವಹಿಸುವ ಟ್ಯಾಬ್ಲೊ ರಚಿಸಿ ಸುಸೂತ್ರವಾಗಿ ಮೆರವಣಿಗೆ ನಿರ್ವಹಿಸ ಬೇಕು. ಮೆರವಣಿಗೆಯಲ್ಲಿ ಆರೋಗ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ತೋಟಗಾರಿಕಾ ಇಲಾಖೆ, ತುಳು ಸಾಹಿತ್ಯ ಅಕಾಡಮಿ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ ಧಾರ್ಮಿಕ ದತ್ತಿ ಇಲಾಖೆ, ಮಹಾನಗರ ಪಾಲಿಕೆ, ವಾರ್ತಾ ಇಲಾಖೆಯು ಜನಜಾಗೃತಿ ಮೂಡಿಸುವಂತಹ ಟ್ಯಾಬ್ಲೊಗಳನ್ನು ತಯಾರಿಸಬೇಕು. ಟ್ಯಾಬ್ಲೋ ವಿಷಯವನ್ನು ಅ.9ರೊಳಗೆ ಜಿಲ್ಲಾಡಳಿತಕ್ಕೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೆರವಣಿಗೆಯ ಸಂಧರ್ಭದಲ್ಲಿ ಯಾವುದೇ ರೀತಿಯ ಸಂಚಾರ ಸಮಸ್ಯೆ ಉಂಟಾಗದಂತೆ ಪೊಲೀಸ್ ಇಲಾಖೆ ಕ್ರಮ ವಹಿಸಿಕೊಳ್ಳಬೇಕು. ಪುರಭವನದಲ್ಲಿ ಸಂಜೆ 3:30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಆರಂಭಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಸುಮಾರು 700 ವಿದ್ಯಾರ್ಥಿಗಳು ಹಾಗೂ ಇತರ ಸಂಘ-ಸಂಸ್ಥೆಗಳು ಭಾಗವಹಿಸಲಿವೆ. ಕಲಾವಿದರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಶೌಚಾಲಯ ಹಾಗೂ ಇನ್ನಿತರ ವ್ಯವಸ್ಥೆ ಕಲ್ಪಿಸಿಕೊಡಬೇಕು. ಜಿಲ್ಲಾಮಟ್ಟದ ಕನ್ನಡ ರಾಜೋತ್ಸವ ಆಚರಣೆಯ ಸಂದರ್ಭದಲ್ಲಿ ನೀಡುವ ಜಿಲ್ಲಾ ಪ್ರಶಸ್ತಿಗೆ ಅರ್ಜಿಗಳನ್ನು ಅ.19ರೊಳಗೆ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್‌ಕುಮಾರ್ ಕಲ್ಕೂರ ಸೇರಿದಂಥೆ ವಿವಿಧ ಇಲಾಖಾ ಅಧಿಕಾರಿಗಳು, ಕನ್ನಡ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.