ನೆರೆ ಪರಿಹಾರಕ್ಕೆ ಒತ್ತಾಯಿಸಿ ಅ.10ಕ್ಕೆ ವಿಧಾನಸೌಧ ಮುತ್ತಿಗೆ: ಕೋಡಿಹಳ್ಳಿ ಚಂದ್ರಶೇಖರ್

Update: 2019-10-04 17:32 GMT
ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು, ಅ.4: ನೆರೆ ಸಂತ್ರಸ್ತರ ಕುರಿತಂತೆ ರಾಜ್ಯ ಮತ್ತು ಕೇಂದ್ರ ಸರಕಾರದ ಧೋರಣೆ ವಿರೋಧಿಸಿ, ಅ.10 ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ನೆರೆ ಹಾಗೂ ಪ್ರವಾಹದಿಂದ ಹಲವು ಜಿಲ್ಲೆಗಳು ಸಂಕಷ್ಟಕ್ಕೀಡಾಗಿವೆ. ಸಾಕಷ್ಟು ರೈತರು ಮನೆ, ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಆದರೂ ಸರಕಾರ ಜನರ ನೆರವಿಗೆ ಧಾವಿಸದೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಹೀಗಾಗಿ ವಿಧಾನಸೌಧಕ್ಕೆ ಮುತ್ತಿಗೆ ಹಾಕದೆ ಅನ್ಯ ಮಾರ್ಗವಿಲ್ಲವೆಂದು ತಿಳಿಸಿದರು.

ರಾಜ್ಯದ ಉತ್ತರ ಭಾಗದಲ್ಲಿ ನೆರೆಯಿಂದಾಗಿ ಅನೇಕ ಅನಾಹುತಗಳು ಸಂಭವಿಸಿದ್ದರೂ ಪ್ರಧಾನ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡದೆ ರೈತರನ್ನು ನಿರ್ಲಕ್ಷಿಸಿದ್ದಾರೆ. ರಾಜ್ಯದ ಪ್ರವಾಹ ಪರಿಹಾರ ಕುರಿತಂತೆ ಇದುವರೆಗೂ ಪ್ರಧಾನಿ ನರೇಂದ್ರ ಮೋದಿ ಯಾವುದೇ ಹೇಳಿಕೆ ನೀಡಿಲ್ಲ. ಆ ಮೂಲಕ ತಾನೊಬ್ಬ ರೈತ ವಿರೋಧಿ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ ಎಂದು ಅವರು ಹೇಳಿದರು.

ಕಳೆದ ವರ್ಷದ ಬರಗಾಲ ಪರಿಹಾರಕ್ಕೆ ಪ್ರಧಾನಿ ಮೋದಿಯವರು 2018ರಲ್ಲಿ 1,059 ಕೋಟಿ ರೂ. ಬಿಡುಗಡೆ ಮಾಡಿದ್ದರೂ ರಾಜ್ಯ ಸರಕಾರ ರೈತರಿಗೆ ಪರಿಹಾರ ವಿತರಿಸಿಲ್ಲ ಎಂದ ಅವರು, ವಿಧಾನಸಭೆ ಚಳಿಗಾಲ ಅಧಿವೇಶನ ಬೆಳಗಾವಿಯಲ್ಲಿ ನಡೆಯಬೇಕಿತ್ತು. ಆದರೆ, ಪ್ರವಾಹ ಸಂತ್ರಸ್ತರ ವಿರೋಧ ಎದುರಿಸಬೇಕಾಗುತ್ತದೆ ಎನ್ನುವ ಮುನ್ಸೂಚನೆ ಅರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ಅಧಿವೇಶನ ನಡೆಸಲು ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು.

ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಕೇಂದ್ರ ಹಾಗೂ ರಾಜ್ಯ ಸರಕಾರ ತೋರುತ್ತಿರುವ ನಿರ್ಲಕ್ಷವನ್ನು ಖಂಡಿಸಿ ರಾಜ್ಯ ರೈತ ಸಂಘದಿಂದ ಅ.10ರಂದು ಬೆಳಗ್ಗೆ 11ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ಹೊರಟು ವಿಧಾನಸೌಧ ಮುತ್ತಿಗೆ ಹಾಕಲಿದ್ದಾರೆ.

-ಕೋಡಿಹಳ್ಳಿ ಚಂದ್ರಶೇಖರ್, ರಾಜ್ಯ ರೈತ ಸಂಘ ರಾಜ್ಯಾಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News