ಎನ್‌ಆರ್‌ಸಿ ವಿಸ್ತರಣೆ ಮತ ಬ್ಯಾಂಕ್ ಧ್ರುವೀಕರಣದ ಹುನ್ನಾರ: ಸೀತಾರಾಮ ಯೆಚೂರಿ

Update: 2019-10-05 18:03 GMT

ಹೊಸದಿಲ್ಲಿ, ಅ.5: ದೇಶದ ಇತರ ರಾಜ್ಯಗಳಲ್ಲೂ ಎನ್‌ಆರ್‌ಸಿ(ರಾಷ್ಟ್ರೀಯ ಪೌರತ್ವ ನೋಂದಣಿ ಪಟ್ಟಿ)ಯನ್ನು ವಿಸ್ತರಿಸುವ ಕೇಂದ್ರ ಸರಕಾರದ ನಿರ್ಧಾರಕ್ಕೆ ಸಿಪಿಐ(ಎಂ) ಕೇಂದ್ರ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

   ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ಊರ್ಜಿತಗೊಳಿಸುವ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ಇತರ ರಾಜ್ಯಗಳಿಗೂ ವಿಸ್ತರಿಸುವ ಕೇಂದ್ರ ಸರಕಾರದ ನಿರ್ಧಾರ ಮತಬ್ಯಾಂಕ್ ಧ್ರುವೀಕರಿಸುವ ಹುನ್ನಾರವಾಗಿದೆ ಎಂದು ಸಿಪಿಎಐಂ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಹೇಳಿದ್ದಾರೆ.

ದೇಶದಲ್ಲಿ ತಲೆದೋರಿರುವ ಆರ್ಥಿಕ ಬಿಕ್ಕಟ್ಟು ಹಾಗೂ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಗೆ ಕೇಂದ್ರ ಸರಕಾರದ ತಪ್ಪು ನಿರ್ಧಾರಗಳೇ ಕಾರಣ ಎಂದು ಟೀಕಿಸಿರುವ ಯೆಚೂರಿ, ಕೇಂದ್ರ ಸರಕಾರದ ವಿರುದ್ಧ ಅಕ್ಟೋಬರ್ 10ರಿಂದ 16ರ ಮಧ್ಯೆ ದೇಶವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.

      ಕಾಶ್ಮೀರದಲ್ಲಿ ಸಹಜ ಸ್ಥಿತಿ ನೆಲೆಸಿದೆ ಎಂಬ ಕೇಂದ್ರ ಸರಕಾರದ ಹೇಳಿಕೆಯನ್ನು ಟೀಕಿಸಿದ ಅವರು, ಕಣಿವೆ ರಾಜ್ಯದಲ್ಲಿರುವ ಪರಿಸ್ಥಿತಿಯ ಬಗ್ಗೆ ಬಿಜೆಪಿ ಮತ್ತು ಕೇಂದ್ರ ಸರಕಾರ ಸುಳ್ಳು ಹೇಳುತ್ತಿದೆ. ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯ ಮುಹಮ್ಮದ್ ಯೂಸುಫ್ ತಾರಿಗಾಮಿ ಗೃಹಬಂಧನಲ್ಲಿಲ್ಲ ಎಂದು ಸರಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದ್ದರೂ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಅವರಿಗೆ ಅವಕಾಶ ನಿರಾಕರಿಸಲಾಗಿದೆ. ಕಾಶ್ಮೀರದಲ್ಲಿ ಪರಿಸ್ಥಿತಿ ಹೇಗಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ಉದ್ಯೋಗ ಕಳೆದುಕೊಂಡಿರುವ ಕಾರ್ಮಿಕರಿಗೆ ಸರಕಾರ ಮಾಸಿಕ ಪಿಂಚಣಿ ಸೌಲಭ್ಯ ಒದಗಿಸಬೇಕು ಹಾಗೂ ಸಾರ್ವಜನಿಕ ಕ್ಷೇತ್ರದ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಅಂತ್ಯಗೊಳಿಸಬೇಕು ಎಂದವರು ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News