ಸುಭದ್ರ ಆಡಳಿತ ನೀಡಿದ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಲಿ: ಡಿ.ಬಸವರಾಜ್

Update: 2019-10-06 17:23 GMT

ದಾವಣಗೆರೆ, ಅ.6: ಸುಭದ್ರ ಆಡಳಿತ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ವಿಪಕ್ಷ ನಾಯಕರನ್ನಾಗಿ ಪಕ್ಷದ ವರಿಷ್ಠರು ನೇಮಕ ಮಾಡಬೇಕೆಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ.ಬಸವರಾಜ್ ಮನವಿ ಮಾಡಿದರು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕರ ನೇಮಕಾತಿಗಾಗಿ, ಕೆಪಿಸಿಸಿ ನಾಯಕತ್ವ ಬದಲಿಸಲು ಹಾಗೂ ವಿಧಾನ ಪರಿಷತ್‍ನ ವಿರೋಧ ಪಕ್ಷದ ಮುಖ್ಯ ಸಚೇತಕರ ನೇಮಕಾತಿಯ ಬಗ್ಗೆ ಅಭಿಪ್ರಾಯ ಸಂಗ್ರಹಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂಧನ್ ಮಿಸ್ತ್ರಿ ಬೆಂಗಳೂರಿಗೆ ಆಗಮಿಸಿದ್ದು, ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದ ನಾಯಕರಾಗಿ ನೇಮಿಸಬೇಕು ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಸಬೇಕೆಂದು ಎಂದರು. 

ಬಡವರ, ಶೋಷಿತರ, ಹಿಂದುಳಿದವರ, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗಗಳ ಪರವಾಗಿ ಐದು ವರ್ಷಗಳ ಕಾಲ ಸುಭದ್ರ ಆಡಳಿತ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯನವರು ಬಡವರ ರಾಯಭಾರಿಯಾಗಿದ್ದಾರೆ. ಅವರು ಮಾಸ್ ಲೀಡರ್ ಆಗಿರುವುದಲ್ಲದೆ, ಓಟು ತರುವ ಮೀಷನ್ ಆಗಿದ್ದಾರೆ. ಕೋಮುವಾದಿಗಳನ್ನು ಅಧಿಕಾರದಿಂದ ದೂರ ಇಡಲಿಕ್ಕಾಗಿ ಸಿದ್ದರಾಮಯ್ಯ ಅವರನ್ನು ಪಕ್ಷದ ವರಿಷ್ಠರು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಬೇಕೆಂದು ಒತ್ತಾಯಿಸಿದರು. 

ಕರ್ನಾಟಕದ ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಘೋರ ಅನ್ಯಾಯ ಮಾಡಿದೆ. ರಾಜ್ಯದಲ್ಲಿ ಸುರಿದ ಭಾರೀ ಮಳೆ ಹಾಗೂ ಮಹಾರಾಷ್ಟ್ರದ ಕೋಯ್ನಾ ಅಣೆಕಟ್ಟಿನಿಂದ ಹರಿಸಿದ ನೀರಿನಿಂದಾಗಿ ನದಿಗಳು ಉಕ್ಕಿ ಹರಿದು ಪ್ರವಾಹ ಸಂಭವಿಸಿ, ಸುಮಾರು ಒಂದು ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚು ಹಾನಿ ಸಂಭವಿಸಿದೆ. ಆದರೆ, ರಾಜ್ಯ ಸರ್ಕಾರ ತನ್ನ ಹುಳುಕು ಮುಚ್ಚಿ ಹಾಕಿಕೊಳ್ಳಲಿಕ್ಕಾಗಿ ಕೇವಲ 38 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ-ಪಾಸ್ತಿ ಹಾನಿಯಾಗಿದೆ ಎಂಬುದಾಗಿ ಕೇಂದ್ರ ಸರ್ಕಾರಕ್ಕೆ ತಪ್ಪು ವರದಿ ಸಲ್ಲಿಸಿದೆ. 1200 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿದ್ದು, ಇದು ಭಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಕಾಂಗ್ರೆಸ್ ಮುಖಂಡರುಗಳಾದ ಅಲ್ಲಾವಲಿ ಗಾಜಿಖಾನ್, ಆಟೋ ತಿಮ್ಮಣ್ಣ, ಬೆಂಡಿಗೆರೆ ಗುರುಸಿದ್ದಪ್ಪ, ಕೆ.ಸಿ.ಚಂದ್ರಶೇಖರ್, ತಿರುಮಲಪ್ಪ, ಡಿ.ಶಿವಕುಮಮಾರ್, ಮಹೇಶ್ ಸೇರಿ ಇತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News