ಸಂಸತ್ತಿನ ಮಾದರಿಯಲ್ಲಿ ವ್ಯವಸ್ಥೆ: ಸ್ಪೀಕರ್ ಕಾಗೇರಿ

Update: 2019-10-10 14:15 GMT

ಬೆಂಗಳೂರು, ಅ.10: ವಿಧಾನಸಭೆಯಲ್ಲಿ ಖಾಸಗಿ ಸುದ್ದಿ ವಾಹಿನಿಗಳ ಕ್ಯಾಮರಾಗಳನ್ನು ನಿಷೇಧಿಸಿರುವ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸತ್ತಿನ ಉಭಯ ಸದನಗಳಾದ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿರುವ ವ್ಯವಸ್ಥೆಯನ್ನೆ ನಮ್ಮ ರಾಜ್ಯದ ವಿಧಾನಸಭೆಯಲ್ಲಿ ಮಾಡಿದ್ದೇನೆ ಎಂದರು.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ವಿಧಾನಸಭೆಯ ಅಧಿವೇಶನ ಆರಂಭವಾಗುತ್ತಿದೆ. ರಾಜ್ಯದ ಅಭಿವೃದ್ಧಿ, ಬೆಳವಣಿಗೆಗೆ ಕುರಿತು ಸದನದಲ್ಲಿ ಚರ್ಚೆ ಆಗಬೇಕು ಎಂಬುದು ನಮ್ಮ ಅಪೇಕ್ಷೆ ಎಂದರು.

ಮಾಧ್ಯಮದವರಿಗೆ ಎಲ್ಲ ಮಾಹಿತಿಯೂ ಸಿಗುತ್ತದೆ. ಯಾವುದನ್ನು ನಾವು ಮುಚ್ಚಿಡುವುದಿಲ್ಲ. ಇದು ಅನೇಕ ವರ್ಷಗಳಿಂದ ಚರ್ಚೆ ನಡೆಯುತ್ತಿತ್ತು. ಸ್ಪೀಕರ್‌ಗಳ ಸಮ್ಮೇಳನದಲ್ಲಿ ನಿರಂತರವಾಗಿ ಮಾಧ್ಯಮ ನಿರ್ಬಂಧದ ಬಗ್ಗೆ ಚರ್ಚೆಯಾಗಿದೆ ಎಂದು ಅವರು ಹೇಳಿದರು.

ಲೋಕಸಭೆ ಹಾಗೂ ರಾಜ್ಯಸಭೆ ಮಾದರಿಯಲ್ಲಿ ನಾವು ಇಲ್ಲಿ ವ್ಯವಸ್ಥೆ ಮಾಡುತ್ತೇವೆ. ಮಾಧ್ಯಮಗಳ ನಿರ್ಬಂಧ ಪ್ರಾಯೋಗಿಕವಾಗಿ ಮೂರು ದಿನಗಳು ನೋಡುತ್ತೇವೆ. ಮುಂದಿನ ದಿನಗಳಲ್ಲಿ ಈ ನಿರ್ಧಾರ ಮುಂದುವರೆಸಬೇಕಾ ಅಥವಾ ಹೇಗೆ ಎಂದು ತೀರ್ಮಾನ ಕೈಗೊಳ್ಳುತ್ತೇವೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News